Advertisement

ಬಿಜೆಪಿಯಲ್ಲಿ ಗುಂಪುಗಾರಿಕೆ-ಭಿನ್ನಾಭಿಪ್ರಾಯ ಇಲ್ಲ

11:28 AM May 27, 2022 | Team Udayavani |

ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ನಾಲ್ಕು ವಿಧಾನ ಪರಿಷತ್‌ ಚುನಾವಣೆಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಯವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ. ಕಳೆದ ಬಾರಿ ಎರಡು ಸ್ಥಾನಗಳಲ್ಲಿ ಗೆದ್ದಿದ್ದೆವು. ಆದರೆ ಈ ಬಾರಿ ನಾಲ್ಕಕ್ಕೆ ನಾಲ್ಕೂ ಸ್ಥಾನಗಳನ್ನು ಬಿಜೆಪಿ ಪಡೆಯುತ್ತದೆ ಎಂದರು.

ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಯಾವುದೇ ಗುಂಪುಗಾರಿಕೆ ಅಥವಾ ಭಿನ್ನಾಭಿಪ್ರಾಯ ಇಲ್ಲ. ಅಭಿಪ್ರಾಯಗಳಲ್ಲಿ ವ್ಯತ್ಯಾಸಗಳು ಇರುತ್ತವೆ. ಇದು ಸಹಜ. ಒಂದು ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯವಸ್ಥೆ ಅಡಿಯಲ್ಲಿ ಅಥವಾ ಒಂದು ಮನೆ-ಕುಟುಂಬಗಳ ಅಭಿಪ್ರಾಯಗಳಲ್ಲಿ ವ್ಯತ್ಯಾಸ ಇರುತ್ತದೆ. ಅದೇ ರೀತಿ ಇಲ್ಲೂ ಇದೆ. ಅದನ್ನು ಸರಿ ಮಾಡಿಕೊಂಡು ಎಲ್ಲರೂ ಒಟ್ಟಾಗಿ ಹೋಗುತ್ತಾರೆ. ಒಂದೇ ಅಭಿಪ್ರಾಯದಡಿ ಈ ಬಾರಿ ಎರಡೂ ಸ್ಥಾನಗಳನ್ನು ಗೆಲ್ಲಬೇಕು ಎಂದು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಸೋಲಿಗೆ ಯಾರು ಕಾರಣ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಂದು ಚುನಾವಣೆಯಿಂದ ಇನ್ನೊಂದು ಚುನಾವಣೆಯಲ್ಲಿ ವ್ಯತ್ಯಾಸಗಳು ಇರುತ್ತವೆ. ಎಲ್ಲ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎನ್ನಲಾಗುವುದಿಲ್ಲ. ಕೆಲವೊಂದು ವ್ಯತ್ಯಾಸಗಳಿಂದ ಸೋಲು ಆಗಿರುತ್ತದೆ. ಅದು ಭಿನ್ನಾಭಿಪ್ರಾಯ ಅಥವಾ ಗುಂಪುಗಾರಿಕೆಯಿಂದ ಆಗಿದೆ ಎನ್ನುವಂತಿಲ್ಲ. ಮತದಾರರ ಕಾರಣದಿಂದ ಸೋಲು ಆಗಿದೆ ಎಂದು ಸಮರ್ಥಿಸಿಕೊಂಡರು.

ಇದಕ್ಕೂ ಮುನ್ನ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಸಚಿವರು, ಸಂಸದರು, ಶಾಸಕರು ಹಾಗೂ ಪದಾಧಿಕಾರಿಗಳ ಸಭೆ ನಡೆಸಿದ ನಳೀನಕುಮಾರ ಕಟೀಲು ಅವರು, ವೈಯಕ್ತಿಕ ಭಿನ್ನಾಭಿಪ್ರಾಯ, ಮನಸ್ತಾಪ ಬದಿಗಿಟ್ಟು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಭೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾಗಿಯಾಗಿದ್ದರು. ಆದರೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೈರು ಹಾಜರಿ ಎದ್ದು ಕಂಡಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next