ಬೆಂಗಳೂರು: ಕಾಂಗ್ರೆಸ್ ಪಕ್ಷ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿವೆ. ಕಾಂಗ್ರೆಸ್ ಯಾರ ಜತೆಯೂ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಬಿಜೆಪಿ ಜೈಲಿಗೆ ಹೋಗಿ ಬಂದಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೊಷಿಸಿದೆ. ರಾಜ್ಯದ ಜನತೆ ಅವರನ್ನು ಬೆಂಬಲಿಸುವುದಿಲ್ಲ. ಬಿಜೆಪಿಗೆ ರಾಜ್ಯದಲ್ಲಿ ಅಂತಹ ಯಾವುದೇ ಪ್ರಭಾವಿ ನಾಯಕರು ಇಲ್ಲದ ಕಾರಣ ಮೋದಿ, ಅಮಿತ್ ಶಾ, ಆದಿತ್ಯನಾಥ್‌ರಂತಹ ದೆಹಲಿ ನಾಯಕರನ್ನು ಕರೆದುಕೊಂಡು ಬರುತ್ತಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಸಚಿವ ಪಿಯೂಷ್ ಗೋಯಲ್ ಹಣಕಾಸು ಅವ್ಯವಹಾರದ ಆರೋಪ ಎದುರಿಸುತ್ತಿದ್ದಾರೆ. ಪಿಯೂಷ್ ಗೋಯಲ್ ಸಚಿವರಾಗುವ ಮೊದಲು ಫ್ಲಾಸ್‌ನೆಟ್ ಇನ್‌ಫೋ ಸಲ್ಯೂಷನ್ಸ್ ಕಂಪನಿಯಲ್ಲಿ ನಿರ್ದೆಕಶರಾಗಿದ್ದರು. ಅವರ ಪತ್ನಿ ಸೀಮಾ ಕೂಡ ನಿರ್ದೇಶಕರಾಗಿದ್ದರು.
ಆದರೆ, ಸಚಿವ ಸ್ಥಾನ ಪಡೆಯುವ ಮೊದಲು ಆ ಕಂಪನಿಗೆ ರಾಜೀನಾಮೆ ನೀಡಿ ಆ ಕಂಪನಿ ಷೇರುಗಳನ್ನ ಪಿರಾಮಲ್ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 1 ಸಾವಿರ ಪಟ್ಟು ಹೆಚ್ಚಿನ ಮೌಲ್ಯಕ್ಕೆ ಮಾರಾಟ ಮಾಡಿದ್ದಾರೆ. ಇದರಲ್ಲಿ ಸ್ವಹಿತಾಸಕ್ತಿ ಅಡಗಿದ್ದು, ಈ ಬಗ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ಆಸ್ತಿಯ ಬಗ್ಗೆ ವಿವರ ನೀಡುವಾಗಲೂ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗ ನಾನೂ ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಪಿಯೂಷ್ ಗೋಯಲ್ ಅವರ ವಿಷಯದಲ್ಲಿ ಬೇನಾಮಿ ಆಸ್ತಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತಕ್ಷಣ ಅವರನ್ನು ಸಂಪುಟದಿಂದ ಕೈ ಬಿಟ್ಟು, ಸಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.