Advertisement

ಪ್ರತ್ಯೇಕ ಧರ್ಮಕ್ಕೆ ಭಿನ್ನಾಭಿಪ್ರಾಯವಿಲ್ಲ

04:59 PM Oct 11, 2018 | Team Udayavani |

ಬೀದರ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಹೋರಾಟ ನಡೆಸುತ್ತಿರುವ ಮಠಾಧೀಶರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹುಲಸೂರಿನ ಗುರುಬಸವೇಶ್ವರ ಸಂಸ್ಥಾನ ಮಠದ ಶ್ರೀ ಶಿವಾನಂದ ಸ್ವಾಮೀಜಿ ನುಡಿದರು.

Advertisement

ನಗರದಲ್ಲಿ ಬುಧವಾರ ನಡೆದ ನವದೆಹಲಿಯ ಲಿಂಗಾಯತ ಬೃಹತ್‌ ಸಮಾವೇಶದ ಮಾಹಿತಿ ಕೇಂದ್ರ, ಲಿಂಗಾಯತ ಸಮನ್ವಯ ಸಮಿತಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಹಿಂದಿನ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದನ್ನು ಅಂಗೀಕರಿಸಿ ಸ್ವತಂತ್ರ ಧರ್ಮ ಮಾನ್ಯತೆ ಹಾಗೂ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಕಲ್ಪಿಸುವುದಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ದೇಶದ ರಾಜಧಾನಿಯಲ್ಲಿ ಬೃಹತ್‌ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಡಿಸೆಂಬರ್‌ 10ರಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ನಡೆಯಲಿರುವ ಲಿಂಗಾಯತ ಬೃಹತ್‌ ಸಮಾವೇಶದ ಯಶಸ್ಸಿಗೆ ಎಲ್ಲರೂ ಒಗ್ಗೂಡಿ ಶ್ರಮಿಸಬೇಕು ಎಂದು ಕರೆ ನೀಡಿದರು. ಕೌಠಾದ ಬಸವಯೋಗಾಶ್ರಮದ ಬೆಲ್ದಾಳ
ಸಿದ್ಧರಾಮ ಶರಣರು ಮಾತನಾಡಿ, ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವುದರಿಂದ ರಾಷ್ಟ್ರದ ಅಖಂಡತೆಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯೇಕ ಧರ್ಮ ಮಾನ್ಯತೆ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. 

ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಸ್ವತಂತ್ರ ಧರ್ಮ ಮಾನ್ಯತೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಲ್ಕಿ ಮಠವು ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ದೆಹಲಿ ಸಮಾವೇಶ
ಯಶಸ್ವಿಗೂಳಿಸುವ ನಿಟ್ಟಿನಲ್ಲಿ ಮಠ ಶಕ್ತಿ ಮೀರಿ ಪ್ರಯತ್ನಿಸಲಿದೆ. ಶ್ರೀ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಮಠದ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಬೀದರ ಜಿಲ್ಲಾ ಲಿಂಗಾಯತ ಸಮನ್ವಯ ಸಮಿತಿ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ಡಿಸೆಂಬರ್‌ 10, 11 ಮತ್ತು 12ರಂದು ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಲಿಂಗಾಯತ ಬೃಹತ್‌ ಸಮಾವೇಶದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿರುವ ಲಿಂಗಾಯತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೀದರ್‌ ಜಿಲ್ಲೆಯಿಂದ ಸುಮಾರು 10 ಸಾವಿರ ಜನ ಭಾಗವಹಿಸಲಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಲಿಂಗಾಯತರ ಏಕತೆ ಪ್ರದರ್ಶನಗೊಳ್ಳಲಿದೆ ಎಂದರು.

Advertisement

ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವೇ ಆಗಿದೆ. ಸಕಲ ಜೀವಾತ್ಮರಿಗೆ ಲೇಸು ಬಯಸುವ ಧರ್ಮ ಇದಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತರ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದರು. ಸಮಾವೇಶಕ್ಕೆ ತೆರಳುವವರಿಗೆ ಅನುಕೂಲ ಮಾಡಿಕೊಡಲು ಮಾಹಿತಿ ಕೇಂದ್ರ ತೆರೆಯಲಾಗಿದೆ. ಇಲ್ಲಿ ಸಮಾವೇಶಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

ಬಸವಗಿರಿಯ ಶ್ರೀ ಪ್ರಭುದೇವರು, ಬಸವಕಲ್ಯಾಣದ ಶ್ರೀ ಬಸವಪ್ರಭು ಸ್ವಾಮೀಜಿ, ಲಿಂಗಾಯತ ಅಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜಿ. ಶೆಟಕಾರ, ಭಾರತೀಯ ಬಸವ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಬಾಬುವಾಲಿ, ಮುಖಂಡ ಶ್ರೀಕಾಂತ ಸ್ವಾಮಿ, ರಾಜೇಂದ್ರಕುಮಾರ ಗಂದಗೆ ಮಾತನಾಡಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಮುಖಂಡರಾದ ಸೋಮಶೇಖರ ಪಾಟೀಲ, ಕುಶಾಲರಾವ್‌ ಪಾಟೀಲ ಖಾಜಾಪುರ, ಬಸವರಾಜ ಪಾಟೀಲ ಹಾರೂರಗೇರಿ, ಶಿವರಾಜ ಪಾಟೀಲ ಅತಿವಾಳ, ಶಂಕರೆಪ್ಪ ಹೊನ್ನಾ, ರಾಜಕುಮಾರ ಪಾಟೀಲ ಬಗದಲ್‌, ಸಿ.ಎಸ್‌. ಪಾಟೀಲ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next