ಬೆಂಗಳೂರು: ಸ್ನಾತಕ್ಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೇಳಿರುವಷ್ಟು ಪ್ರವೇಶ ದರ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಖಾಸಗಿ ವೈದ್ಯಕೀಯ ಕಾಲೇಜುಗಳು ಡೀಮ್ಡ್ ವಿಶ್ವ ವಿದ್ಯಾಲಯಗಳಲ್ಲಿ ಇರುವಂತೆ ಫೀ ನಿಗದಿ ಮಾಡುವಂತೆ ಮನವಿ ಮಾಡಿವೆ. ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ. ಸ್ನಾತಕೋತ್ತರ ಕೋರ್ಸ್‌ಗಳಿಗೆ ಸರ್ಕಾರ 6 ಲಕ್ಷ ರೂಪಾಯಿ ಫೀ ನಿಗದಿ ಪಡಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಕನಿಷ್ಠ 12 ರಿಂದ 24 ಲಕ್ಷದ ವರೆಗೆ ಫೀ ಹೆಚ್ಚಳ ಮಾಡುವಂತೆ ಮನವಿ ಮಾಡಿವೆ. ಅಷ್ಟೊಂದು ಪ್ರಮಾಣದಲ್ಲಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಮತ್ತೂಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಸೀಟ್ ಹೆಚ್ಚಳ: ರಾಜ್ಯದಲ್ಲಿ ಈ ವರ್ಷ ಸರ್ಕಾರಿ ಕೋಟಾದಲ್ಲಿ 150 ಎಂಬಿಬಿಎಸ್ ಸೀಟುಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಜನವರಿ ಅಂತ್ಯದೊಳಗೆ ಎಂಸಿಐ ಸೀಟು ಹಂಚಿಕೆ ಮಾಡುತ್ತದೆ. ಕಳೆದ ನಾಲ್ಕು ವರ್ಷದಲ್ಲಿ ಸರ್ಕಾರಿ ಕೋಟಾದಡಿ 1400 ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದಲ್ಲಿ ಪರೀಕ್ಷಾ ಅಕ್ರಮ ನಿಯಂತ್ರಣಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಪಾಲುದಾರಿಕೆಯ ಸಂಸ್ಥೆಗೆ ಟೆಂಡರ್ ನೀಡಲಾಗಿದೆ ಎಂಬ ಆರೋಪದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ ಅವರು, ಟೆಂಡರ್ ಕರೆಯುವ ಅಧಿಕಾರ ವಿಶ್ವ ವಿದ್ಯಾಲಯಕ್ಕೆ ಇರುವುದರಿಂದ ಸರ್ಕಾರದ ಹಸ್ತಕ್ಷೇಪ ಇಲ್ಲ ಎಂದರು.
ವೈದ್ಯಕೀಯ ಕಾಲೇಜುಗಳಿರುವ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುವುದು ಕಂಡು ಬಂದರೆ, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದ ವೈದ್ಯರು ಸೂಕ್ತ ಕಾರಣ ನೀಡಬೇಕೆಂದು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.