ಚಿತ್ರದುರ್ಗ: ರಾಜ್ಯದಲ್ಲಿ 1118,519 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನಿದೆ. ರಸಗೊಬ್ಬರಕ್ಕೆ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ಜಿಲ್ಲೆಯ ಮುಂಗಾರು ಹಂಗಾಮಿನ ಬಿತ್ತನೆ ಸಿದ್ಧತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಈ ವರ್ಷದ ಆರಂಭದಲ್ಲಿ ಏಪ್ರಿಲ್ 1ರಿಂದ 5,94,773 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇತ್ತು. 5,23,746 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ರಾಜ್ಯಕ್ಕೆ ಬಂದಿದ್ದು, ಒಟ್ಟು 11,18,519 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಕೇಂದ್ರ ಸರ್ಕಾರ ರಸಗೊಬ್ಬರ ಖರೀದಿಗೆ ದೇಶಾದ್ಯಂತ 2.39 ಸಾವಿರ ಕೋಟಿ ರೂ. ರಿಯಾಯಿತಿ ನೀಡಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದಾಗಿ 240 ಹೆಕ್ಟೇರ್ ತೋಟಗಾರಿಕೆ ಹಾಗೂ 40 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಹಾನಿಯಾಗಿದೆ. ಒಟ್ಟು 37 ಲಕ್ಷ ರೂಪಾಯಿ ನಷ್ಟವಾಗಿದೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸರ್ವೇ ಕಾರ್ಯ ಕೈಗೊಂಡು ವರದಿ ನೀಡಿದ್ದಾರೆ. ಬೆಳೆ ಹಾನಿಯಾದವರಿಗೆ ಪರಿಹಾರ ನೀಡಲಾಗುವುದು. ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಇದೆ ಎಂದು ತಿಳಿಸಿದರು.
ಈ ವೇಳೆ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ, ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಜಂಟಿ ಕೃಷಿ ನಿರ್ದೇಶಕ ಪಿ. ರಮೇಶ್‌ಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ. ಸವಿತಾ, ಸಿಸಿಎಫ್ ಚಂದ್ರಶೇಖರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
ಅಕ್ರಮವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಲು ಯಾರಾದರೂ ಪ್ರಯತ್ನ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. -ಬಿ.ಸಿ. ಪಾಟೀಲ್, ಕೃಷಿ ಸಚಿವ