ಬೆಂಗಳೂರು: “ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಚರ್ಚೆ ಅಥವಾ ಚಿಂತನೆ ಇಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸ್ಪಷ್ಟಪಡಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಈ ಸುದ್ದಿ ಹರಡುತ್ತಲೇ ಇದೆ. ಅದೇನು ಗ್ರಹಚಾರವೋ ಗೊತ್ತಿಲ್ಲ. ಹಾಗೊಂದು ವೇಳೆ ಈ ರೀತಿಯ ಸುದ್ದಿಗಳು ನಿಜವಾಗಿದ್ದರೆ, ಈಗಾಗಲೇ ಹತ್ತು ಬಾರಿ ಬೊಮ್ಮಾಯಿ ಅವರು ಸಿಎಂ ಕುರ್ಚಿಯಿಂದ ಇಳಿಯಬೇಕಾಗಿತ್ತು. ಆದರೆ, ನಾನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹೇಳುತ್ತಿದ್ದೇನೆ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಅಥವಾ ಚಿಂತನೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿಯವರೇ ಮುಖ್ಯಮಂತ್ರಿ ಆಗಲಿದ್ದಾರೆ. ಮಾಜಿ ಶಾಸಕ ಸುರೇಶ್ ಗೌಡ ಅವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಬೇಕಿದ್ದರೆ ಈ ಬಗ್ಗೆ ಅವರನ್ನೇ ಕೇಳಿ. ಆದರೆ, ಮುಖ್ಯಮಂತ್ರಿ ಬದಲಾವಣೆ ಸುದ್ದಿ ಕಪೋಲಕಲ್ಪಿತ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದವರು ತಮ್ಮ ಒಳಜಗಳ ಮುಚ್ಚಿಡಲು ಉತ್ಸವ, ಪಾದಯಾತ್ರೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.
– ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ