ಬೆಂಗಳೂರು: ರಾಜ್ಯವನ್ನು ಬಯಲು ಶೌಚ ಮುಕ್ತ ಮಾಡುವಲ್ಲಿ ಸರ್ಕಾರ ಸಂಪೂರ್ಣ ಯಶಸ್ವಿಯಾಗಿಲ್ಲ. ಅದನ್ನು ಜಾರಿಗೊಳಿಸಲು ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದ್ದು, ಜಲಧಾರೆ ಯೋಜನೆ ಜಾರಿಗೊಳಿಸುವ ಮೂಲಕ ಬಯಲು ಬಹಿರ್ದೆಸೆ ಮುಕ್ತ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಬಯಲು ಬಹಿರ್ದೆಸೆ ಮುಕ್ತ ರಾಜ್ಯ ಘೋಷಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉದಯವಾಣಿಯಲ್ಲಿ ಸೋಮವಾರ ಪ್ರಕಟವಾಗಿದ್ದ “ರಾಜ್ಯ ಸಂಪೂರ್ಣ ಬಯಲು ಶೌಚ ಮುಕ್ತವಲ್ಲ’ ಎಂಬ ವಿಶೇಷ ವರದಿಯನ್ನು ಪ್ರಸ್ತಾಪಿಸಿ, ಪತ್ರಿಕೆಯ ವರದಿಯನ್ನು ಒಪ್ಪಿಕೊಳ್ಳುವುದಾಗಿ ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ನಿರ್ಮಾಣ ಮಾಡಿದರೂ, ಶೌಚಾಲಯ ಬಳಕೆಗೆ ನೀರಿನ ಕೊರತೆ ಇರುವುದರಿಂದ ಯೋಜನೆ ಯಶಸ್ವಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಗ್ರಾಮೀಣ ಪ್ರದೇಶದಲ್ಲಿನ ನೀರಿನ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರ ಸುಮಾರು 60 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಎಲ್ಲ ಹಳ್ಳಿಗಳಿಗೂ ದಿನದ 24 ಗಂಟೆ ನೀರು ದೊರೆಯುವಂತೆ ಮಾಡಲಾಗುವುದು ಎಂದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಗುಣಾತ್ಮಕ ಬದಲಾವಣೆ ತರಲು ಸ್ವತ್ಛಮೇವ ಜಯತೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ಕುಟುಂಬವೂ ಈ ಯೋಜನೆಯನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಬಯಲು ಬಹಿರ್ದೆಸೆ ರಾಜ್ಯವನ್ನಾಗಿ ಘೋಷಣೆ ಮಾಡಿರುವುದು ಗ್ರಾಮೀಣ ಕರ್ನಾಟಕದ ಅಭಿವೃದ್ಧಿಯಲ್ಲಿ ಮೈಲುಗಲ್ಲು. 2012 ರ ಬೇಸ್‌ಲೈನ್ ಸಮೀಕ್ಷೆ ಪ್ರಕಾರ ಶೌಚಾಲಯಗಳಿಲ್ಲದ 45 ಲಕ್ಷ ಮನೆಗಳಿಗೆ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಕಳೆದ ನಾಲ್ಕೂವರೆ ವರ್ಷದಲ್ಲಿ 70 ಲಕ್ಷ ಮನೆಗಳಿಗೆ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಹಿಂದಿನ ಸರ್ಕಾರದಲ್ಲಿ ಆರ್‌ಡಿಪಿಆರ್ ಸಚಿವರಾಗಿದ್ದ ಎಚ್.ಕೆ. ಪಾಟೀಲ್ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
2012 ರ ಬೇಸ್‌ಲೈನ್ ಸಮೀಕ್ಷೆಯಿಂದ ಹೊರಗುಳಿದ ಮನೆಗಳಿಗೂ ಶೌಚಾಲಯ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ಒಪ್ಪಿಗೆ ಪಡೆದುಕೊಂಡಿದ್ದೇವೆ. ಸಮೀಕ್ಷೆಯಿಂದ ಹೊರಗುಳಿದ 5 ಲಕ್ಷ ಕುಟುಂಬಗಳಿಗೂ ಸರ್ಕಾರವೇ ಶೌಚಾಲಯ ನಿರ್ಮಾಣ ಮಾಡಿ ಕೊಡಲಿದೆ ಎಂದು ಹೇಳಿದರು.
ಶೌಚಾಲಯ ಆಗಲಿ ಸ್ವಚ್ಛಾಲಯ: ರಾಜ್ಯ ಸರ್ಕಾರ ಶೌಚಾಲಯ ನಿರ್ಮಾಣ ಮಾಡುವುದು ಸರ್ಕಾರದ ಖುಷಿಗಾಗಿ ಅಲ್ಲ, ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ಕಾಪಾಡಲು. ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವತ್ಛ ಮೇವ ಜಯತೇ ಎಂಬ ಅಭಿಯಾನ ಆರಂಭಿಸಲಾಗಿದೆ ಎಂದು ಹೇಳಿದರು.
ಶೌಚಾಲಯ ನಿರ್ಮಾಣ ಮಾಡುವ ಗುರಿ ತಲುಪಿದರೂ ಮಾಡಬೇಕಾದ ಕೆಲಸ ಇನ್ನೂ ಇದೆ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ. ಶೌಚಾಲಯ ನಿರ್ಮಾಣ ಮಾಡುವುದರಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್, ಬಾಗಲಕೋಟೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ವೀಣಾ ಕಾಶಪ್ಪನವರ್, ಆರ್‌ಡಿಪಿಆರ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು. ನಂತರ ಶಾಲಾ ಮಕ್ಕಳಿಂದ ಶೌಚಾಯಲ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆದವು.