ಬೆಂಗಳೂರು: ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಬೇಕೆಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಒತ್ತಡ ಹೇರುತ್ತಿ¨ªಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಡವಿದೆ. ನನ್ನ ಸ್ಪರ್ಧೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕುಳಿತು ತೀರ್ಮಾನ ಮಾಡುತ್ತಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿಕೂಟವನ್ನು ಬಲಪಡಿಸಿ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನನ್ನ ಗುರಿ. ಬಿಜೆಪಿ ಗುರಿಯೂ ಇದೇ ಆಗಿದೆ. ಈ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಹೇಳಿದರು.
ಕೇಂದ್ರದಲ್ಲಿ ನಾನು ಮಂತ್ರಿಯಾಗುವ ಯಾವುದೇ ಪ್ರಸ್ತಾವ ಇಲ್ಲ. ಈ ಸುದ್ದಿ ಎಲ್ಲಿಂದ ಹುಟ್ಟಿತೋ ಗೊತ್ತಿಲ್ಲ. ಚುನಾವಣೆಗೆ ಎರಡು ತಿಂಗಳಷ್ಟೇ ಸಮಯ ಉಳಿದಿದೆ. ಈಗ ನಾನು ಮಂತ್ರಿಯಾಗಿ ಮಾಡುವುದು ಏನಿದೆ? ಕೇಂದ್ರ ಸಚಿವನಾಗಬೇಕು ಎನ್ನುವ ಆಸಕ್ತಿಯೂ ನನ್ನಲ್ಲಿ ಇಲ್ಲ ಎಂದರು.
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಮುಗಿದ ಮೇಲೆ ಕ್ಷೇತ್ರ ಹಂಚಿಕೆ, ಮತ್ತಿತರ ಪ್ರಕ್ರಿಯೆಗಳನ್ನು ಪೂರ್ಣ ಮಾಡಲು ನಿರ್ಧರಿಸಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕ್ಷೇತ್ರಗಳ ಹಂಚಿಕೆಯ ಬಗ್ಗೆ ಎರಡೂ ಪಕ್ಷಗಳಲ್ಲಿ ಅತ್ಯಂತ ಸೌಹಾರ್ದ ಮನೋಭಾವನೆ ಇದೆ ಎಂದು ಕುಮಾರಸ್ವಾಮಿ ಹೇಳಿದರು.
ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕುಟುಂಬ ಸಮೇತ ಅಯೋಧ್ಯೆಗೆ ಹೋಗುತ್ತೇನೆ. ದೇವೇಗೌಡರು ಕೂಡ ಭಾಗಿಯಾಗುತ್ತಾರೆ. ನಮಗೆಲ್ಲರಿಗೂ ಆಹ್ವಾನ ಬಂದಿದೆ ಎಂದು ಕುಮಾರಸ್ವಾಮಿ ತಿಳಿಸಿದರು.