ಬೆಂಗಳೂರು: ಇನ್ನೂ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿರುವ ಮೇಲ್ಮೆ„ ಸುಳಿಗಾಳಿ ಹಾಗೂ ಮಧ್ಯಪ್ರದೇಶದಿಂದ ತಮಿಳುನಾಡುವರೆಗಿನ ಕಡಿಮೆ ಒತ್ತಡದ ತಗ್ಗು (ಟ್ರಫ್) ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ ಎಂದು ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ತಿಳಿಸಿದರು.
ಅದರಂತೆ, ಶುಕ್ರವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಂಡ್ಯ, ವಿಜಯಪುರ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಹಲವೆಡೆಗಳಲ್ಲಿ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.
ಬೆಂಗಳೂರಲ್ಲಿ ಧಾರಾಕಾರ ಮಳೆ: ಶುಕ್ರವಾರ ಮಧ್ಯಾಹ್ನದ ನಂತರ ಬೆಂಗಳೂರು ನಗರದಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, 20ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸಿದರು.
ಸತತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ವಾತಾವರಣದಲ್ಲಿ ಬರೋಬ್ಬರಿ 11 (33 ರಿಂದ 22)ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಇದೇ ವೇಳೆ, ಚಿಂತಾಮಣಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುವಂತಾಯಿತು.
ನೆಲಮಂಗಲ ತಾಲೂಕಿನಾದ್ಯಂತ ಶುಕ್ರವಾರ ಸಂಜೆ ವೇಳೆಗೆ ಸುರಿದ ಆಲಿಕಲ್ಲು ಮಳೆಯಿಂದ ಅಪಾರ ಬೆಳೆಹಾನಿಯಾಗಿದ್ದು, ಫಸಲಿಗೆ ಬಂದ ಬೆಳೆ ಕ್ಷಣಾರ್ಧದಲ್ಲಿ ನಾಶವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದು, ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.
ಚನ್ನಪಟ್ಟಣದಲ್ಲಿ ಭಾರೀ ಗಾಳಿ-ಮಳೆಯಿಂದಾಗಿ ಹಲವು ಕಡೆ ವಿದ್ಯುತ್ ಕಂಬ ಮತ್ತು ಮರಗಳು ಧರೆಗುರುಳಿದ್ದು, ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.