ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಲವು ಕಾರ್ಯಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಫಲ ಕೊಟ್ಟಿಲ್ಲ. ಹೀಗಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕರು ಮತ್ತು ಪದವಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರ ಸಮನ್ವಯದ ಮೂಲಕ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ.
ಪ್ರಾಂಶುಪಾಲರ ನಡುವೆ ಸಮನ್ವಯ ಸಾಧಿಸುವ ಮೂಲಕ ವಿದ್ಯಾರ್ಥಿಗಳು ಅರ್ಧಕ್ಕೆ ಶಾಲಾ-ಕಾಲೇಜು ಬಿಡುವುದನ್ನು ತಪ್ಪಿಸಲು ಸಾಧ್ಯ. ಗ್ರಾಮೀಣ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿಗೆ ವಿದ್ಯಾಭ್ಯಾಸ ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಮಾಹಿತಿ ಆ ಭಾಗದ ಪಿಯುಸಿ ವಿಭಾಗದ ಪ್ರಾಂಶುಪಾಲರಿಗೆ ನೀಡಿದರೆ, ಎಸ್ಸೆಸ್ಸೆಲ್ಸಿ ಮುಗಿಸಿದ ವಿದ್ಯಾರ್ಥಿಗಳು ಯಾವ ಕಾಲೇಜು ಸೇರಿದ್ದಾರೆ ಅಥವಾ ಸೇರಿಲ್ಲ ಎಂಬುದರ ಮಾಹಿತಿಯೂ ಸುಲಭವಾಗಿ ಸಿಗಲಿದೆ. ದಾಖಲಾತಿ ಆಂದೋಲನಗಳು ವ್ಯಾಪಕವಾಗಿ ನಡೆಯುತ್ತಿರುವುದರಿಂದ 2019-20ನೇ ಸಾಲಿನಲ್ಲಿ ಸರ್ಕಾರಿ ಶಾಲಾ, ಕಾಲೇಜಿನ ದಾಖಲಾತಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಹಳ್ಳಿಗಳಲ್ಲಿ ಒಂದನೇ ತರಗತಿ ಸೇರಲಿರುವ ಮಕ್ಕಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವೂ ನಡೆಯುತ್ತಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ಪಾಲರಿಗೆ ಮನವರಿಕೆ ಮಾಡುವ ಮೂಲಕ ಮತ್ತು ಪೂರ್ವ ಪ್ರಾಥಮಿಕ ತರಗತಿ, ಆಂಗ್ಲಮಾಧ್ಯಮ ಇತ್ಯಾದಿಗಳ ಮಾಹಿತಿ ನೀಡುವ ಮೂಲಕ ಸರ್ಕಾರಿ ಶಾಲೆಗೆ ಮಕ್ಕಳನ್ನುಬ ಸೆಳೆಯುವ ಯತ್ನವು ರಾಜ್ಯಾದ್ಯಂತ ನಡೆಯುತ್ತಿದೆ ಎನ್ನಲಾಗಿದೆ.
Advertisement
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ನೇರವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿಕೊಳ್ಳುವಂತೆ ಅಥವಾ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಸೇರಿಕೊಳ್ಳದಿರುವ ಸಂದರ್ಭದಲ್ಲಿ ಸರ್ಕಾರಿ ಪದವಿ ಕಾಲೇಜು ಸೇರಿಕೊಳ್ಳುವಂತೆ ಅವರನ್ನು ಸಂಪರ್ಕಿಸಿ ಮನವೊಲಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.