ಬೆಂಗಳೂರು: ರಾಜ್ಯದ ತಾಲೂಕು ಕೇಂದ್ರಗಳಲ್ಲಿರುವ ಕ್ರೀಡಾಂಗಣಗಳನ್ನು ಬಳಸಿಕೊಂಡು ಶಾಲಾ ಮಕ್ಕಳಿಗೆ ಕ್ರೀಡಾ ತರಬೇತಿ ನೀಡುವ ಮೂಲಕ ಕ್ರೀಡಾ ಪ್ರತಿಭಾನ್ವೇಷಣೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಆಟ-ಪಾಠಕ್ಕೆ ಆದ್ಯತೆ :
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ| ಕೆ.ಸಿ. ನಾರಾಯಣಗೌಡ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಕ್ಕಳು ತರಗತಿ ಪಾಠಗಳ ಆಟಕ್ಕೂ ಆದ್ಯತೆ ನೀಡಲಾಗಿದೆ. ಆಟ-ಪಾಠಗಳು ಜತೆಯಾಗಿ ಸಾಗುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಇಲಾಖೆಯಲ್ಲಿರುವ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಕ್ರೀಡಾಂಗಣ ಮೇಲ್ವಿಚಾರಣೆ ಜವಾಬ್ದಾರಿ ವಹಿಸಿದರೆ, ಎರಡೂ ಇಲಾಖೆಗಳ ಸಮನ್ವಯದಿಂದ ಕ್ರೀಡಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಎರಡೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.