Advertisement

ಸಾವಿರ ಮಕ್ಕಳು ಶಾಲೆ ವಂಚಿತರು

11:33 AM Dec 17, 2018 | |

ಮೈಸೂರು: ಶಿಕ್ಷಣ ವಂಚಿತ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾದ್ಯಂತ ನಡೆಸಲಾಗಿರುವ ಸಮೀಕ್ಷೆ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಗುರುತಿಸಲಾಗಿರುವ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಮುಂಬರುವ ಜೂನ್‌ನಿಂದ ಅಗತ್ಯ ಶಿಕ್ಷಣ ಕಲ್ಪಿಸಲು ಶಿಕ್ಷಣ ಇಲಾಖೆ ಕಾರ್ಯಪ್ರವೃತ್ತವಾಗಿದೆ. 

Advertisement

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸುವ ಸಲುವಾಗಿ ನ.14ರಿಂದ 28ವರೆಗೆ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯ ಅಂಕಿ ಅಂಶಗಳನ್ನು ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.  ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಅಂದಾಜಿಸಲಾಗಿದೆ. ಈ ಮಕ್ಕಳನ್ನು ಗುರುತಿಸಿ ಅವರ ವಯೋಮಿತಿಗೆ ಅನುಗುಣವಾಗಿ 2019ರ ಜೂನ್‌ನಿಂದ ಶಾಲಾ ತರಗತಿಗಳ ಜತೆಗೆ ವಿಶೇಷ ತರಬೇತಿ ನೀಡುವ ಬಗ್ಗೆಯೂ ಶಿಕ್ಷಣ ಇಲಾಖೆ ಕ್ರಮವಹಿಸಿದೆ. 

ಜಂಟಿ ಸಮೀಕ್ಷೆ: ಶಿಕ್ಷಣ ವಂಚಿತ ಮಕ್ಕಳನ್ನು ಗುರುತಿಸುವ ಸಲುವಾಗಿ ಈವರೆಗೂ ಶಿಕ್ಷಣ ಇಲಾಖೆ ವತಿಯಿಂದ ಮಾತ್ರವೇ ಸಮೀಕ್ಷೆ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಶಿಕ್ಷಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಮೀಕ್ಷೆ ನಡೆಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಆಶಾ ಕಾರ್ಯಕರ್ತೆಯರು, ಎಸ್‌ಡಿಎಂಸಿ ಸದಸ್ಯರ, ಜತೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರನ್ನು ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲಾಗಿದೆ. ಅಲ್ಲದೇ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲು ತಾಲೂಕು ಹಾಗೂ ಜಿಲ್ಲಾಮಟ್ಟದ ಸಭೆಗಳನ್ನು ನಡೆಸಲಾಗಿದೆ. 

ಕನ್ನಡ ಶಾಲೆ ಮುಚ್ಚಿಲ್ಲ: ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಮೈಸೂರು ಜಿಲ್ಲಾದ್ಯಂತ ಈವರೆಗೂ ಯಾವುದೇ ಕನ್ನಡ ಶಾಲೆಯನ್ನು ಮುಚ್ಚಲು ಗುರುತಿಸಿಲ್ಲ. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಗೆ ಸೇರಿದ 2,147, ಸಮಾಜ ಕಲ್ಯಾಣ ಇಲಾಖೆಗೆ ಸೇರಿದ 113, ಅನುದಾನಿತ 275, ಅನುದಾನರಹಿತ 910 ಹಾಗೂ 12 ಕೇಂದ್ರೀಯ ವಿದ್ಯಾಲಯಗಳು ಸೇರಿದಂತೆ ಒಟ್ಟು 3,457 ಶಾಲೆಗಳಿವೆ.

Advertisement

ಈ ಎಲ್ಲಾ ಶಾಲೆಗಳಲ್ಲೂ ಕನ್ನಡ ಬೋಧನೆ ಹಾಗೂ ತರಗತಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಶಾಲೆಗಳನ್ನು ಮಚ್ಚುವ ಪರಿಸ್ಥಿತಿ ಎದುರಾಗಿಲ್ಲ ಎಂದು ಸಾರ್ವಜನಿಕರ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಸ್‌. ಮಮತಾ ತಿಳಿಸಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅವರಿಗೆ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯ ಜತೆಗೆ ಹಲವು ಎನ್‌ಜಿಒಗಳು ಸಹ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. 

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲಾಗಿದ್ದು, ಅಂಕಿ ಅಂಶಗಳನ್ನು ತಂತ್ರಾಂಶಕ್ಕೆ ಅಳವಡಿಸಲಾಗುತ್ತಿದೆ. ಈ ಬಾರಿ ಸಮೀಕ್ಷೆ ನಡೆಸಲು ಶಿಕ್ಷಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳನ್ನು ಬಳಸಿಕೊಳ್ಳಲಾಗಿದೆ. ಇದರಿಂದ ಪರಿಣಾಮಕಾರಿ ವರದಿ ನೀಡಲು ಹೆಚ್ಚು ಅನುಕೂಲವಾಗಿದೆ. 
-ಎಸ್‌. ಮಮತಾ, ಡಿಡಿಪಿಐ

* ಸಿ. ದಿನೇಶ್‌

Advertisement

Udayavani is now on Telegram. Click here to join our channel and stay updated with the latest news.

Next