ಚಿಂಚೋಳಿ: ಕೇಂದ್ರ ಬಿಜೆಪಿ ಸರ್ಕಾರ ರೈತರು ಮತ್ತು ಕಾಂಗ್ರೆಸ್ ಪಕ್ಷ ನಡೆಸಿದ ಹೋರಾಟಕ್ಕೆ ಮಣಿದು ಮೂರು ಕೃಷಿ ನೀತಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದುಕೊಂಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಂಭ್ರಮಿಸಿದರು.
ಪಟ್ಟಣದ ತಾಂಡೂರು-ಚಿಂಚೋಳಿ ರಾಜ್ಯ ಹೆದ್ದಾರಿಯ ಹನುಮಾನ ದೇವಾಲಯ ಕ್ರಾಸ್ ಹತ್ತಿರ ಕಾಂಗ್ರೆಸ್ ಕಾರ್ಯಕರ್ತರು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಹೋರಾಟಕ್ಕೆ ಮಣಿದು ಕೃಷಿ ನೀತಿಯನ್ನು ಹಿಂದಕ್ಕೆ ಪಡೆದುಕೊಳ್ಳುವ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ, ಸಂಭ್ರಮಿಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಿ ಮಾತನಾಡಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಅಧಿ ನಾಯಕಿ ಸೋನಿಯಾ ಗಾಂ ಧಿ ಕೇಂದ್ರ ಸರ್ಕಾರಕ್ಕೆ ರೈತರ ವಿರೋಧಿ ನೀತಿ ಹಿಂದಕ್ಕೆ ಪಡೆದುಕೊಳ್ಳುವಂತೆ ಆಗ್ರಹಿಸಿದ್ದರು.
ಅಲ್ಲದೇ ಅನೇಕ ರಾಜ್ಯಗಳಲ್ಲಿ ರೈತ ಸಂಘದ ಮುಖಂಡರು ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಕೊನೆಗೆ ರೈತರ ಹೋರಾಟಕ್ಕೆ ಜಯ ಸಿಕ್ಕಿರುವುದು ಸಂತಸವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಪುರಸಭೆ ಉಪಾಧ್ಯಕ್ಷ ಶಬ್ಬೀರ ಅಹೆಮದ್, ಗಣಪತರಾವ್, ಅಬ್ದುಲ್ ಬಾಸೀತ, ಶರಣು ಮೋತಕಪಳ್ಳಿ, ಸಂತೋಷ ಗುತ್ತೇದಾರ, ಮಲ್ಲಿಕಾರ್ಜುನ ಭೂಶೆಟ್ಟಿ, ಗಂಗಾಧರ ಗಡ್ಡಿಮನಿ ಇನ್ನಿತರರಿದ್ದರು.