ಬೆಂಗಳೂರು: ವಿಶ್ವವನ್ನೇ ತಲ್ಲಣಗೊಳಸಿಸಿರುವ ಕೊರೊನಾ ಸೊಂಕು ಮಹಾಮಾರಿ ಭಾರತದಲ್ಲೂ ಹಬ್ಬುತ್ತಿದೆ. ಕರ್ನಾಟಕದಲ್ಲಿ ಒಟ್ಟು ನಾಲ್ಕು ಸೋಂಕು ಪ್ರಕರಣಗಳು ದೃಢಪಟ್ಟಿದೆ.
ಸೋಮವಾರ ಸಂಜೆ ಬೆಂಗಳೂರಿನಲ್ಲಿ ಒಂದು ಪ್ರಕರಣ ಖಚಿತವಾಗಿತ್ತು. ಇದೀಗ ಮತ್ತೆ ಮೂವರಿಗೆ ಈ ಮಾರಣಾಂತಿಕ ಕೊರೊನಾ ವೈರಸ್ ಖಚಿತವಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ.
ಸೋಮವಾರ ಸೋಂಕು ಪತ್ತೆಯಾಗಿದ್ದ ವ್ಯಕ್ತಿಯ ಪತ್ನಿ, ಮಗಳು ಮತ್ತು ಸಹೋದ್ಯೋಗಿಯಲ್ಲಿ ಸೋಂಕು ಇರುವ ಬಗ್ಗೆ ಇಂದು ಖಚಿತವಾಗಿದೆ. ಎಲ್ಲರಿಗೂ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಪ್ರತ್ಯೇಕ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.