ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪ ನಿರ್ಮಾಣ ಕಾಮಗಾರಿಯನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಡಾ. ಚಂದ್ರಶೇಖರ್ ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅನುಭವ ಮಂಟಪ ನಿರ್ಮಾಣಕ್ಕೆ ಇದುವರೆಗೆ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವಿಸ್ತೃತ ಯೋಜನಾ ವರದಿಗೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿದೆ. ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಿ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು.
ಭೂವ್ಯಾಜ್ಯಗಳನ್ನು ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು. ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಚಂದ್ರಶೇಖರ್ ಪಾಟೀಲ್, ಬಸವಕಲ್ಯಾಣ ಉಪಚುನಾವಣೆ ವೇಳೆ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು 1 ವರ್ಷದಲ್ಲಿ ಅನುಭವ ಮಂಟಪ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಅನುಭವ ಮಂಟಪ ನಿರ್ಮಾಣಕ್ಕೆ 101 ಎಕರೆ ಜಮೀನು ಬೇಕು. ಆದರೆ, ಈವರೆಗೆ ಭೂಸ್ವಾಧೀನ ಆಗಿಲ್ಲ ಎಂದು ಗಮನಕ್ಕೆ ತಂದರು.
ಇದಕ್ಕೆ ಧºನಿಗೂಡಿಸಿದ ಬಿಜೆಪಿ ಸದಸ್ಯ ಶಶೀಲ್ ನಮೋಶಿ, ಜಮೀನು ವಿವಾದವಿದೆ. ಸ್ವಾಮೀಜಿಯೊಬ್ಬರ ಸ್ವಾಧೀನದಲ್ಲಿ ಜಮೀನಿದ್ದು, ಅವರು ಬಿಟ್ಟುಕೊಡಲು ಒಪ್ಪುತ್ತಿಲ್ಲ. ಮುಖ್ಯಮಂತ್ರಿಯವರು, ಸಚಿವರು ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬೇಕು. ಭೂಸ್ವಾಧೀನ ಆಗದೆ ಎಷ್ಟೇ ಹಣ ಬಿಡುಗಡೆ ಮಾಡಿದರೂ ಪ್ರಯೋಜವವಿಲ್ಲ ಎಂದು ಹೇಳಿದರು.