ಉಡುಪಿ: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೂ ಮೊದಲು ಕ್ಷೇತ್ರವಾರು ಸಮೀಕ್ಷೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಮತ್ತು ಯುವ ಅಭ್ಯರ್ಥಿಗಳಿಗೆ ಆದ್ಯತೆ ಹೆಚ್ಚಿರಲಿದೆ ಎಂದು ರಾಜ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.
ಉಡುಪಿಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದತ್ತ ಹೆಚ್ಚು ಗಮನಹರಿಸಿದ್ದಾರೆ. ಒಂದು ವರ್ಷದಲ್ಲಿ ಚುನಾವಣೆ ಬರುವುದರಿಂದ ಬಿ.ಎಸ್. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಬಿಜೆಪಿ ಎದುರಿಸಲಿದೆ ಎಂದರು.
ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದಿಂದ ಆತಂರಿಕ ಸರ್ವೇ ನಡೆಸಿ, ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಿದ್ದೇವೆ. ಯುವ ಅಭ್ಯರ್ಥಿಗಳಿಗೂ ಟಿಕೆಟ್ ನೀಡಲಾಗುವುದು ಎಂದರು.
ಬಂದವರಿಗೆ ಅನ್ಯಾಯವಾಗದು
ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿ ನೋಡಿ ಅನೇಕ ನಾಯಕರು ಬಿಜೆಪಿಗೆ ಸೇರುತ್ತಿದ್ದಾರೆ. ಬಂದವರೆಲ್ಲರನ್ನು ಶಾಸಕ, ಸಂಸದರನ್ನಾಗಿ ಮಾಡಲು ಸಾಧ್ಯವಿಲ್ಲ, ಎಲ್ಲೆಲ್ಲಿ ಬೇರೆ ಪಕ್ಷದಿಂದ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಾರೋ ಅಲ್ಲಿ ಸ್ಥಳೀಯ ಕಾರ್ಯಕರ್ತರಿಂದ ಮಾಹಿತಿ ಪಡೆಯಲಾಗುತ್ತಿದೆ. ಉಡುಪಿಯಲ್ಲಿ ಪ್ರಮೋದ್ ಮಧ್ವರಾಜರು ಬಿಜೆಪಿಗೆ ಬಂದಿದ್ದಾರೆ. ಅವರಿಗೆ ಪಕ್ಷ ಖಂಡಿತ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದರು.
Related Articles
ಶಾಸಕ ಬಸನ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯದ ನಾಯಕರು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಶಿಸ್ತುಪಾಲನ ಸಮಿತಿಗೆ ವರದಿ ಕಳುಹಿಸಿಕೊಟ್ಟಿದ್ದೇವೆ. ಅವರು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.