ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯನ್ನು ಅಧಿಕ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ನಿಷೇಧಾಜ್ಞೆ ನಿಯಮ ಉಲ್ಲಂಘಿಸದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡುತ್ತಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ಆ.26 ರಂದು ಮಡಿಕೇರಿಯಲ್ಲಿ ಪ್ರತಿಭಟನಾ ಸಮಾವೇಶ ನಡೆಸುವ ಕುರಿತು ಹೇಳಿಕೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.24 ರ ಬೆಳಗ್ಗೆ 6 ರಿಂದ ಆ.27 ರ ಸಂಜೆ 6 ಗಂಟೆಯವರೆಗೆ ಕೊಡಗಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ: ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿ ತಪ್ಪಿಸಲು ಯತ್ನ,ಗುಂಡು ಹಾರಿಸಿ ದರೋಡೆಕೋರರ ಬಂಧನ
ಕಾಂಗ್ರೆಸ್ ನಿಂದ ನಡೆಯಲಿರುವ ಎಸ್‌ಪಿ ಕಛೇರಿ ಮುತ್ತಿಗೆ ಪ್ರತಿಭಟನೆ ಮತ್ತು ಅದೇ ದಿನ ಬಿಜೆಪಿಯಿಂದ ನಡೆಯಲಿರುವ ಜನ ಜಾಗೃತಿ ಸಮಾವೇಶದಲ್ಲಿ ಲಕ್ಕಕ್ಕೂ ಮೀರಿ ಜನ ಪಾಲ್ಗೊಳ್ಳುವ ಹಿನ್ನೆಲೆ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಆ.24 ರ ಮಧ್ಯರಾತ್ರಿ 12 ಗಂಟೆಯಿಂದ ಆ.26 ರ ಮಧ್ಯ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲೆಯ ಗಡಿ ಭಾಗದ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಸೂಕ್ತ ತಪಾಸಣೆ ಹಾಗೂ ಭದ್ರತೆ ನೀಡಲಾಗಿದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ ಕಡೆಗಳಿಂದ ಸೂಕ್ತ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲೆಗೆ ಕರೆಸಿಕೊಂಡು ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕಾನೂನು ಉಲ್ಲಂಘಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಡೆದಿದೆ.