ಕಲಬುರಗಿ: ಕಲ್ಯಾಣ ಕರ್ನಾಟಕದ ರೈತರ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ. ವಿಧಾನಸೌಧದಲ್ಲಿ ಕೂತು ಕೆಲಸ ಮಾಡುವ ಸರ್ಕಾರ ಇದಲ್ಲ, ರೈತರ ಬಾಗಿಲಿಗೆ, ಹೊಲಗಳಿಗೆ ಸರ್ಕಾರ ಹೋಗಲಿದೆ. ಮುಂದಿನ ಕಲಬುರಗಿ ಪ್ರವಾಸದಲ್ಲಿ ಒಂದು ದಿನ ಇಲ್ಲಿಯೆ ರೈತರೊಂದಿಗೆ ಕಾಲ ಕಳೆದು ಅವರ ಸಂಕಷ್ಟ ಆಲಿಸುವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಬುಧವಾರ ನಗರದ ಆಳಂದ ರಸ್ತೆಯಲ್ಲಿರುವ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದಿಂದ 5.45 ಕೋಟಿ ರೂ. ವೆಚ್ಚದಲ್ಲಿ ಮಹಾವಿದ್ಯಾಲಯದ ವಿಸ್ತರಣಾ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅನ್ನದಾತ ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಆಶಯದಂತೆ ರೈತರ ಆದಾಯ ದ್ವಿಗುಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿದ ಕೂಡಲೇ ಜಾತಿ-ಧರ್ಮ ನೋಡದೇ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಬೇಕು ಎಂಬ ಕಾರಣದಿಂದ 2500ರೂ. ಗಳಿಂದ 11500 ರೂ. ವರೆಗೆ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ. ಇದರ ಜೊತೆಗೆ ಇತ್ತೀಚೆಗೆ 8ರಿಂದ 10ನೇ ತರಗತಿ ಓದುವ ರೈತರ ಹೆಣ್ಣು ಮಕ್ಕಳಿಗೆ ವಾರ್ಷಿಕ 3000ರೂ. ವಿದ್ಯಾರ್ಥಿ ವೇತನ ಜಾರಿಗೊಳಿಸಲಾಗಿದೆ. ಒಟ್ಟಾರೆಯಾಗಿ ರೈತ ಕುಟುಂಬವನ್ನು ಮೇಲಕ್ಕೆತ್ತುವ ಸರ್ವ ಪ್ರಯತ್ನ ಸರ್ಕಾರದಿಂದ ನಡೆದಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಮಾತನಾಡಿ ಕೃಷಿ ಮಹಾವಿದ್ಯಾಲಯಕ್ಕೆ ಮುಖ್ಯ ರಸ್ತೆಯಿಂದ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕೆಕೆಆರ್‌ಡಿಬಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು.
ಸಂಸದ ಡಾ| ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ| ಅವಿನಾಶ ಉಮೇಶ ಜಾಧವ, ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಭೀಮರಾಯನಗುಡಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಕುಡಾ ಅಧ್ಯಕ್ಷ ದಯಾಘನ್ ಧಾರವಾಡಕರ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಧಂಗಾಪೂರ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ| ಕೆ.ಎನ್.ಕಟ್ಟಿಮನಿ, ವಿ.ವಿ. ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಕೊಟ್ರಪ್ಪ ಬಿ. ಕೋರೆರ, ತ್ರಿವಿಕ್ರಮ ಜೋಷಿ, ಸುನೀಲ ವರ್ಮಾ, ಕೃಷಿ ಸಚಿವರ ತಾಂತ್ರಿಕ ಸಲಹೆಗಾರ ಎ.ಬಿ.ಪಾಟೀಲ, ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸುಗೂರು, ಕೃಷಿ ಮಹಾವಿದ್ಯಾಲಯದ ಡೀನ್ ಡಾ| ಸುರೇಶ ಎಸ್.ಪಾಟೀಲ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.