ಹಾಸನ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ರೂಪಿಸಲಾಗಿರುವ ಯೋಜನೆಗಳನ್ನು ಕಾಲ ಮಿತಿಯೊಳಗೆ ಅರ್ಹಫಲಾನುಭವಿಗಳಿಗೆ ತಲುಪಿಸಬೇಕೆಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಶ್ವೇತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳ ಕಾರ್ಯಕ್ರಮಗಳ ಅನುಷ್ಠಾನದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಆರ್ಥಿಕ ಹಾಗೂ ಭೌತಿಕ ಪ್ರಗತಿಯ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಅನುದಾನ ಸದ್ಬಳಕೆಯಾಗದಿದ್ದರೆ ಕ್ರಮ: ಎಲ್ಲ ಇಲಾಖಾ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ವೈಯಕ್ತಿಕ ಹಾಗೂ ಸಮುದಾಯಅಭಿವೃದ್ಧಿ ಕಾಮಗಾರಿಗಳ ಹಾಗೂ ಸವಲತ್ತುಗಳನ್ನುಆದಷ್ಟು ಬೇಗನೆ, ಗುಣಮಟ್ಟದೊಂದಿಗೆ ತಲುಪಿಸಬೇಕು. ಒಂದು ವೇಳೆ ಹಣ ಸದ್ಬಳಕೆ ಯಾಗದಿದ್ದರೆ ಸರ್ಕಾರಕ್ಕೆ ವರದಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹೇಳಿದರು.
ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ಪೂರೈಸಿ: ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ, ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು, ಗ್ರಾಮಗಳ ರಸ್ತೆ, ಕುಡಿಯುವ ನೀರು, ಚರಂಡಿ,ಮನೆಗಳ ನಿರ್ಮಾಣ ಕಾಮಗಾರಿಗಳ ಅನುಷ್ಠಾನ ಚುರುಕುಗೊಳಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್: ಸಭೆಗೆಹಾಜರಾಗದ ಇಲಾಖೆ ಅಧಿಕಾರಿಗಳಿಗೆ ಕಾರಣಕೇಳಿ ನೋಟಿಸ್ ಜಾರಿ ಮಾಡಿ ವಿವರಣೆ ಪಡೆಯುವಂತೆ ಶ್ವೇತಾ ಅವರು ಸಿಇಒಗೆ ಸೂಚನೆ ನೀಡಿದರು.
ಯೋಜನೆ ಅನುಷ್ಠಾನಗೊಳಿಸಿ: ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್ ಮಾತನಾಡಿ ಜಿಲ್ಲಾ ಪಂಚಾಯತಿವ್ಯಾಪ್ತಿಗೆ ಬರುವ ಎಲ್ಲಾ ಇಲಾಖೆ ಅಧಿಕಾರಿಗಳುನಿಗದಿಪಡಿಸಿರುವ ಅವಧಿಯೊಳಗೆ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಪರಸ್ಪರಸಮನ್ವಯತೆಯೊಂದಿಗೆ ಕೆಲಸ ಮಾಡಿ ಸರ್ಕಾರದಆಶಯಗಳಿಗೆ ತಕ್ಕಂತೆ ಕೆಲಸ ಮಾಡಬೇಕೆಂದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಅವರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಆರ್ಥಿಕ ಭೌತಿಕ ಸಾಧನೆ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಚಂದ್ರಶೇಖರ್ ಅವರೂ ಹಾಜರಿದ್ದರು.