ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಪೈಕಿ ತೀವ್ರ ಕುತೂಹಲ ಹಾಗೂ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ಚಿಮಬಂಗಾಳದಲ್ಲಿ ಈ ಬಾರಿಯೂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ. ಇದರೊಂದಿಗೆ ಟಿಎಂಸಿ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ.
ಸದ್ಯದ ಫಲಿತಾಂಶದ ಪ್ರಕಾರ ತೃಣಮೂಲ ಕಾಂಗ್ರೆಸ್ 200ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಭಾರತೀಯ ಜನತಾ ಪಕ್ಷ ಅತೀ ದೊಡ್ಡ ಪಕ್ಷವಾಗಿ ಮೂಡಿಬಂದಿದ್ದು, 86 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
292 ಸದಸ್ಯ ಬಲದ ಪಶ್ಚಿಮಬಂಗಾಳ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 148 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು. 2016ರ ವಿಧಾನಸಭಾ ಚುನಾವಣೆಯಲ್ಲಿ 293 ಕ್ಷೇತ್ರಗಳಲ್ಲಿ ಸ್ಫರ್ಧಿಸಿದ್ದ ಟಿಎಂಸಿ 211 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರಕ್ಕೆ ಏರಿತ್ತು.
148 ಕ್ಷೇತ್ರಗಳಲ್ಲಿ ಸ್ಫರ್ಧಿಸಿದ್ದ ಎಡಪಕ್ಷ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಪಕ್ಷ 92 ಸ್ಥಾನಗಳಲ್ಲಿ ಸ್ಪರ್ಧಿಸಿ 44 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಭಾರತೀಯ ಜನತಾ ಪಕ್ಷ 291 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಬಲವೃದ್ದಿಸಿಕೊಂಡ ಬಿಜೆಪಿ, ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್, ಎಡಪಕ್ಷ!
2021ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮಬಂಗಾಳದಲ್ಲಿ ನೇರ ಪೈಪೋಟಿ ಏರ್ಪಟ್ಟಿದ್ದು ಟಿಎಂಸಿ ಮತ್ತು ಬಿಜೆಪಿ ನಡುವೆ. 2016ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷ ಮೈತ್ರಿಕೂಟ 90 ಸ್ಥಾನಗಳಲ್ಲಿ ಗೆದ್ದಿದ್ದವು. ಆದರೆ ಈ ಚುನಾವಣೆಯಲ್ಲಿ ಪಶ್ಚಿಮಬಂಗಾಳದ ಕಾಂಗ್ರೆಸ್, ಎಡಪಕ್ಷದ ಒಲವುಳ್ಳ ಮತದಾರರ ಬಲಪಂಥೀಯ ಬಿಜೆಪಿಯತ್ತ ವಾಲಿರುವುದು ಸ್ಪಷ್ಟವಾಗಿದೆ. ಇದರೊಂದಿಗೆ ಪಶ್ಚಿಮಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷ ತಮ್ಮ ಅಸ್ತಿತ್ವವನ್ನು
ಕಳೆದುಕೊಂಡಂತಾಗಿದೆ.