Advertisement

ತಂಬಾಕು ಉತ್ಪನ್ನ ಮಾರಾಟ ತಡೆಗೆ ಮುಂದಾಗಿ  

05:45 PM Mar 31, 2022 | Niyatha Bhat |

ಶಿವಮೊಗ್ಗ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ನಿರ್ಬಂಧಿತ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸಂಪೂರ್ಣ ನಿಲ್ಲಿಸಲು ನಿರಂತರ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ|ಆರ್‌.ಸೆಲ್ವಮಣಿ ಸೂಚಿಸಿದರು.

Advertisement

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋಟಾ ಕಾಯ್ದೆ ಉಲ್ಲಂಘನೆಯ 582 ಪ್ರಕರಣಗಳಲ್ಲಿ 64460 ರೂ. ದಂಡ ವಸೂಲು ಮಾಡಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ಹೊರತುಪಡಿಸಿ ಬೇರೆ ತಾಲೂಕುಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಕಾರ್ಯಾಚರಣೆ ಹೆಚ್ಚಿಸಬೇಕು. ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಮಾತ್ರವಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಶಾಲಾ ಕಾಲೇಜುಗಳ 100 ಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ನೀಡಬಾರದು. ತಂಬಾಕು ಉತ್ಪನ್ನಗಳ ಕುರಿತಾಗಿ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತಿಗೆ ಅವಕಾಶ ನೀಡಬಾರದು. ಶಾಲಾ ಕಾಲೇಜುಗಳ ಆವರಣದಲ್ಲಿ ರಾತ್ರಿ ವೇಳೆ ಧೂಮಪಾನ ಅಥವಾ ಮದ್ಯಪಾನ ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿ, ಪ್ರಕರಣ ದಾಖಲಿಸಲು ಈಗಾಗಲೇ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು. ತಂಬಾಕು ವ್ಯಸನ ಮುಕ್ತ ಕೇಂದ್ರ ಪ್ರಸ್ತುತ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ ಕೇವಲ 3908 ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಮನೋ ಚೈತನ್ಯ ಕಾರ್ಯಕ್ರಮದಡಿಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಸಹ ತಂಬಾಕು ವ್ಯಸನ ಮುಕ್ತ ಕೌನ್ಸಿಲಿಂಗ್‌ ವ್ಯವಸ್ಥೆ ಮಾಡಬೇಕು. ತಂಬಾಕು ಚಟದಿಂದ ಮುಕ್ತರಾದರೆ ಬೇರೆ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆ ಕಡಿಮೆ ಎಂದರು.

ಹೊಸನಗರ ತಾಲೂಕಿನ ಹುಂಚ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಇದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ರೇಬಿಸ್‌ ಲಸಿಕೆ ಕಡ್ಡಾಯವಾಗಿ ಹಾಕಿ

Advertisement

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ರೇಬಿಸ್‌ಗೆ ಇಬ್ಬರು ಬಲಿಯಾಗಿರುವುದು ಕಳವಳಕಾರಿ. ಜಿಲ್ಲೆಯಲ್ಲಿ ಪ್ರತಿಯೊಂದು ಸಾಕಿದ ನಾಯಿಗೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಬೇಕು. ಪಶುವೈದ್ಯಕೀಯ ಇಲಾಖೆ ಈ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು. ಬೀದಿನಾಯಿಗಳ ನಿಯಂತ್ರಣ ಕುರಿತು ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮ ಜರುಗಿಸಬೇಕು. ಪ್ರತಿಯೊಂದು ಆಸ್ಪತ್ರೆಯಲ್ಲಿ ರೇಬಿಸ್‌ ವ್ಯಾಕ್ಸಿನ್‌ ಲಭ್ಯತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ರಾಜೇಶ ಸುರಗಿಹಳ್ಳಿ, ಆರ್‌ಸಿಎಚ್‌ ಅಧಿಕಾರಿ ಡಾ| ನಾಗರಾಜ ನಾಯಕ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next