ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ವಿಶೇಷ ಭೋಜನ ಕೂಟ ಏರ್ಪಡಿಸಿದ್ದಾರೆ.
ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಿರುವುದರಿಂದ ಶಾಸಕಾಂಗ ಪಕ್ಷದ ನಾಯಕರಾಗಿ ಪಕ್ಷದ ಶಾಸಕರಿಗೆ ಭೋಜನ ಕೂಟ ಏರ್ಪಡಿಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಹಾಗೂ ಸರ್ಕಾರದ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವಾಗ ತಮ್ಮ ಅಣತಿಯಂತೆ ನಡೆಯಬೇಕು ಎಂಬ ಇಚ್ಛೆ ಹೊಂದಿರುವ ಸಿದ್ದರಾಮಯ್ಯ ಪಕ್ಷದಲ್ಲಿ ಶಾಸಕರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಪರೋಕ್ಷವಾಗಿ ಪ್ರಯತ್ನ ನಡೆಸಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಪರಮೇಶ್ವರ್ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದಂತೆ ನಡೆದುಕೊಳ್ಳುತ್ತಿದ್ದು,ಇದರಿಂದ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಸಂಪೂರ್ಣ ಜೆಡಿಎಸ್ ತೆಕ್ಕೆಗೆ ಹೋಗುವುದನ್ನು ತಡೆಗಟ್ಟಲು ತಾವು ಸರ್ಕಾರದ ಮೇಲೆ ಹಿಡಿತ ಸಾಧಿಸಬೇಕು ಎಂಬ ಇಚ್ಛೆ
ಸಿದ್ದರಾಮಯ್ಯ ಅವರದು ಎನ್ನಲಾಗಿದೆ.