ಬೆಂಗಳೂರು: ದೇಶದ 70ನೇ ಸ್ವಾತಂತ್ರೋತ್ಸವ ದಿನಾಚರಣೆಗೆ ಉದ್ಯಾನ ನಗರಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಕಲ ರೀತಿಯಲ್ಲಿ ಸಜ್ಜುಗೊಂಡಿದ್ದು, ರಾಜ್ಯಮಟ್ಟದ ಸ್ವಾತಂತ್ರೋತ್ಸವ ಆಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5ನೇ ಬಾರಿ ಧ್ವಜಾರೋಹಣ ನರೆವೇರಿಸುತ್ತಿದ್ದು, ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ರಾಷ್ಟ್ರಧ್ವಜಕ್ಕೆ ಪುಷ್ಪಾರ್ಚನೆ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪೊಲೀಸ್ ಇಲಾಖೆ ಭದ್ರತಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದರೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕವಾಯತು ಮತ್ತು ಪಥಸಂಚಲ ನಡೆಸಿಕೊಡಲಿದೆ.
ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಾಡಿನ ಜನತೆಯನ್ನುದ್ದೇಶಿಸಿ ಭಾಷಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ವಾತಂತ್ರ್ಯ ಸಂಗ್ರಾಮದ ಘಟನಾವಳಿಗಳನ್ನು ಮೆಲಕು ಹಾಕುವುದರ ಜೊತೆಗೆ ಕಳೆದ ನಾಲ್ಕು ವರ್ಷದ ಸರ್ಕಾರದ ಸಾಧನೆಯನ್ನು ರಾಜ್ಯದ ಮುಂದಿಡುತ್ತಾ, ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ಹಲವು ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿಯವರು ಪಥಸಂಚನ ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಲಿದ್ದಾರೆ.
ಕೇರಳ ತಂಡ ಅತಿಥಿ: ಪಥಸಂಚಲನದಲ್ಲಿ ಈ ಬಾರಿ ಕೇರಳ ಪೊಲೀಸ್ ತಂಡ ಗೌರವ ಅತಿಥಿಯಾಗಿ ಪಾಲ್ಗೊಳ್ಳುತ್ತಿದೆ. ಇದಲ್ಲದೇ ಸ್ಕೌಟ್ಸ್ ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳೊಂದಿಗೆ ಕವಾಯಿತು ಮತ್ತು ಬ್ಯಾಂಡ್‌ನ ಒಟ್ಟು 34 ತುಕಡಿಗಳಲ್ಲಿ ಸುಮಾರು 1,190 ಮಂದಿ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ 2 ಸಾವಿರಕ್ಕೂ ಹೆಚ್ಚು ಮಕ್ಕಳು ಭಾಗವಹಿಸುತ್ತಿದ್ದು, ವಿಜೇತರಿಗೆ ಮುಖ್ಯಮಂತ್ರಿಯವರು ಬಹುಮಾನ ನೀಡಲಿದ್ದಾರೆ.
ಬಿಗಿ ಭದ್ರತೆ: ಅತಿಗಣ್ಯ, ಗಣ್ಯ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆಯ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು ಹಾಗೂ ಸಾರ್ವಜನಿಕರಿಗಾಗಿ ಒಟ್ಟು 12 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ 9 ಡಿಸಿಪಿ, 16 ಎಸಿಪಿ, 51 ಇನ್ಸ್‌ಪೆಕ್ಟರ್, 91 ಸಬ್ ಇನ್ಸ್‌ಪೆಕ್ಟರ್‌ಗಳನ್ನು ಹಾಗೂ ಮೈದಾನದ ಬಳಿ 8 ಸಶಸ್ತ್ರ ಪೊಲೀಸ್ ತುಕಡಿ ಹಾಗೂ 40 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಭದ್ರತಾ ದೃಷ್ಠಿಯಿಂದ ಮೈದಾನದಲ್ಲಿ 50 ಸಿಸಿಟಿವಿ ಕ್ಯಾಮೆರಾ ಹಾಗೂ 4 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯಪಾಲರು ಸಂಜೆ 5.30ಕ್ಕೆ ರಾಜಭವನದಲ್ಲಿ ಉಪಹಾರ ಕೂಟ ಏರ್ಪಡಿಸಿದ್ದು, ಅದರಲ್ಲಿ ಮುಖ್ಯಮಂತ್ರಿಯವರು ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಸಂಜೆ 6.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಗಳನ್ನು ಏರ್ಪಡಿಸಿದ್ದು, ಅದರಲ್ಲೂ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.