Advertisement

ಇಂದು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

11:25 AM Oct 10, 2018 | Team Udayavani |

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಬುಧವಾರ ಬೆಳಗ್ಗೆ 7.05ರಿಂದ 7.30ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವುದರೊಂದಿಗೆ 2018ನೇ ಸಾಲಿನ ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.

Advertisement

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಉಪಸ್ಥಿತರಿರಲಿದ್ದು, ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಸಾ.ರಾ.ಮಹೇಶ್‌, ಡಾ.ಜಯಮಾಲ, ಸಿ.ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌, ರಾಜಶೇಖರ ಬಸವರಾಜ್‌ ಪಾಟೀಲ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದೇವಿಗೆ ವಿಶೇಷ ಪೂಜೆ: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಶುಚಿಗೊಳಿಸಿ ರುದ್ರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಮಾಡಲಾಗಿದೆ. ಬುಧವಾರ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಬ್ರಾಹ್ಮಿ ಅಲಂಕಾರ ಮಾಡಿ ಮುಂಜಾನೆ 4.30ಕ್ಕೆ ರುದ್ರಾಭಿಷೇಕ, ಪಂಚಾಮೃತಭಿಷೇಕ ಮಾಡಲಾಗುತ್ತದೆ. ನವರಾತ್ರಿಯಲ್ಲಿ 9 ದುರ್ಗೆಯರನ್ನು ಆಹ್ವಾನ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಆಗಮಿಕ ಶಶಿಶೇಖರ ದೀಕ್ಷಿತ್‌ ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ: ಸಂಜೆ 6ಗಂಟೆಗೆ ಅರಮನೆ ಮುಂಭಾಗದ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರಿಗೆ 2018ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಉಪಸ್ಥಿತರಿರುವರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಡಾ.ಜಯಮಾಲ, ಸಿ.ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌ ಪಾಲ್ಗೊಳ್ಳಲಿದ್ದು, ಶಾಸಕ ಎಸ್‌.ಎ.ರಾಮದಾಸ್‌ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement

ಜಂಬೂ ಸವಾರಿ: ಅ.19ರಂದು ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ನಂದೀಧ್ವಜ ಪೂಜೆ ನೆರವೇರಿಸಲಿದ್ದು, ಮಧ್ಯಾಹ್ನ 3.40 ರಿಂದ 4.10ರವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆ ಒಳ ಆವರಣದಲ್ಲಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಸಚಿವ ಜಿ.ಟಿ.ದೇವೇಗೌಡ ಪಾಲ್ಗೊಳ್ಳಲಿದ್ದಾರೆ. ಸಂಜೆ 7ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ನಡೆಯುವ ರೋಮಾಂಚಕಾರಿ ಪಂಜಿನ ಕವಾಯತು ಅನ್ನು ರಾಜ್ಯಪಾಲ ವಜುಭಾಯಿ ವಾಲಾ ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೇರಿದಂತೆ ಸಚಿವರು ಭಾಗವಹಿಸಲಿದ್ದು, ಶಾಸಕ ತನ್ವೀರ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ಖಾಸಗಿ ದರ್ಬಾರ್‌: ನವರಾತ್ರಿಯ ಮೊದಲ ದಿನ (ಪಾಡ್ಯ) ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಎಣ್ಣೆಶಾಸ್ತ್ರ ಮಾಡಿ, ಅರಮನೆಗೆ ಬರುವ ಕೌÒರಿಕರಿಂದ ಚೌಲ ಮಾಡಿಸಿ, ಮಂಗಳ ಸ್ನಾನ ಮಾಡಿಸಲಾಗುತ್ತದೆ. ಸುಮಂಗಲೆಯರು ಮತ್ತು ಪುರೋಹಿತ ಮನೆತನದ ಮಹಿಳೆಯರು ಒಡೆಯರ್‌ಗೆ ಆರತಿ ಮಾಡುತ್ತಾರೆ. ನಂತರ ಅರಮನೆಯ ಚಾಮುಂಡಿತೊಟ್ಟಿಗೆ ತೆರಳಿ ವಿನಾಯಕನಿಗೆ ಪೂಜೆ ಸಲ್ಲಿಸಿದ ಬಳಿಕ ಕಲಶ ಪೂಜೆ ನೆರವೇರಿಸಿ, ಕುಲದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಕಟ್ಟಲಾಗುತ್ತದೆ.

ಅಂದಿನಿಂದ ಕಠಿಣ ವ್ರತಧಾರಿಯಾಗಿ ಶಕ್ತಿ ದೇವತೆಗಳನ್ನು ಪೂಜಿಸುತ್ತಾರೆ. ಬೆಳಗ್ಗೆ 10ಗಂಟೆಗೆ ದರ್ಬಾರ್‌ ಹಾಲ್‌ ನಲ್ಲಿ ರತ್ನಖಚಿತ ಸಿಂಹಾಸನಕ್ಕೆ ಪೂಜೆಸಲ್ಲಿಸಿ, ಸಿಂಹಾಸನಾರೂಢರಾಗಿ ಸುಮಾರು 20 ನಿಮಿಷಗಳ ಕಾಲ ಖಾಸಗಿ ದರ್ಬಾರ್‌ ನಡೆಸುತ್ತಾರೆ. ಈ ವೇಳೆ ಯದುವೀರ್‌ ಅವರ ಪತ್ನಿ ತ್ರಿಷಿಕಾ ಒಡೆಯರ್‌ ಪಾದಪೂಜೆ ಮಾಡುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next