Advertisement

ಇಂದಿನಿಂದ ಮೇಕೆದಾಟು ಪಾದಯಾತ್ರೆ

09:32 PM Feb 26, 2022 | Team Udayavani |

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಒತ್ತಾಯಿಸಿ ಕಾಂಗ್ರೆಸ್‌ ಎರಡನೇ ಹಂತದ ಪಾದಯಾತ್ರೆ ರವಿವಾರ ರಾಮನಗರಿಂದ ಪುನರಾರಂಭಗೊಳ್ಳಲಿದೆ.

Advertisement

ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಚಾಲನೆ ನೀಡಲಿದ್ದಾರೆ.

ಎರಡನೇ ಹಂತದಲ್ಲಿ ಐದು ದಿನಗಳ ಪಾದಯಾತ್ರೆ ನಡೆಯಲಿದ್ದು, ಮಾರ್ಚ್‌ 3 ರಂದು ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶದೊಂದಿಗೆ ಮುಕ್ತಾಯವಾಗಲಿದೆ.

ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶನಿವಾರ ಪಾದಯಾತ್ರೆ ಆರಂಭವಾಗಲಿರುವ ರಾಮನಗರ ಹಾಗೂ ಅಂತ್ಯಗೊಳ್ಳುವ ಸ್ಥಳ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಬೆಂಗಳೂರು ನಾಗರೀಕರಿಗೆ ಕುಡಿಯುವ ನೀರು ಪೂರೈಸಲು, ಕಾವೇರಿ ಪ್ರದೇಶದ ರೈತರನ್ನು ಬದುಕಿಸಲು ನೀರಿಗಾಗಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಭಾನುವಾರ ಬೆಳಗ್ಗೆ 9 ಗಂಟೆಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನಂತರ ಪಾದಯಾತ್ರೆ ಆರಂಭವಾಗಲಿದೆ ಎಂದು ಹೇಳಿದರು.

Advertisement

ಮೇಕೆದಾಟುವಿನಿಂದ ರಾಮನಗರದವರೆಗೆ ಪಾದಯಾತ್ರೆ ಮಾಡಿದ್ದೆವು. ಈ ಮಧ್ಯೆ ಕೋವಿಡ್‌ ಮೂರನೇ ಅಲೆ ಸಂದರ್ಭದಲ್ಲಿ ಜನರ ಆರೋಗ್ಯ, ಕೋರ್ಟ್‌ ಆದೇಶಕ್ಕೆ ಗೌರವ ಸೂಚಿಸಲು ಈ ಪಾದಯಾತ್ರೆಯನ್ನು ನಿಲ್ಲಿಸಿದ್ದೆವು. ಎಲ್ಲಿ ನಿಲ್ಲಿಸಿದ್ದೇವೋ ಈಗ ಅಲ್ಲಿಂದ ಮತ್ತೆ ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.

ಇದು ಪಕ್ಷಾತೀತ ಹೋರಾಟ. ಈ ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್‌ ಪಕ್ಷ ವಹಿಸಿಕೊಂಡಿದೆ. ಎಲ್ಲ ಅಪಾರ್ಟ್‌ಮೆಂಟ್‌ ಸಂಘಗಳು,ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಎಲ್ಲರೂ ಸಹಕಾರ ನೀಡಲಿದ್ದಾರೆ. ಕಾರ್ಮಿಕ, ಕೈಗಾರಿಕಾ ಸಂಘಟನೆ, ಧರ್ಮಗುರುಗಳು, ಜನಸಾಮಾನ್ಯರು ಈ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.

ನಾವು ಐದು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಪಾದಯಾತ್ರೆ ಮಾಡಬೇಕಾಗಿತ್ತು, ಬಜೆಟ್‌ ಅಧಿವೇಶನ ಇರುವ ಕಾರಣ ಕೇವಲ 3 ದಿನ ಪಾದಯಾತ್ರೆ ಮಾಡುತ್ತೇವೆ. ಪಾದಯಾತ್ರೆಗೆ ಬರುವವರು ಮೆಟ್ರೋರೈಲು ಬಳಸಿಕೊಳ್ಳಲು ಅನುಕೂಲವಾಗುವಂತೆ ಈ ಸ್ಥಳ ಆಯ್ಕೆ ಮಾಡಿದ್ದೇವೆ ಎಂದರು.

ಮಾರ್ಚ್‌ 3 ರಂದು ಮಧ್ಯಾಹ್ನ ಪಾದಯಾತ್ರೆ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನ ತಲುಪಲಿದ್ದು, ಅಂದು ಇಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಈ ಸಮಾವೇಶಕ್ಕೆ ಆಗಮಿಸುವವರ ಪ್ರಯಾಣದ ಅನುಕೂಲಕ್ಕಾಗಿ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ಹೊಂದಿಕೊಂಡಿರುವ ಮೆಟ್ರೋ ರೈಲು ನಿಲ್ದಾಣದಿಂದ ಮೆಜೆಸ್ಟಿಕ್‌ ನಿಲ್ದಾಣದವರೆಗೆ ಕಾಂಗ್ರೆಸ್‌ ನಾಯಕರುಗಳು ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಿದರು.ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್‌ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next