ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಮಾ. 28ರಂದು ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯಕಾರಿಯಾಗಲಿದೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಾರ್ವಜನಿಕ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಪ್ರತಿಯೊಬ್ಬರು ಮನೆಯೊಳಗೆ ಕೂತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಿ ಹಾಗೂ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಶನಿವಾರ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಶನಿವಾರದ ಬೆಳವಣಿಗೆ ನೋಡಿ ಇದನ್ನು ಮುಂದುವರಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಪತ್ರಿಕೆ, ಔಷಧ, ಹಾಲಿಗೆ ಅವಕಾಶ
ಅಗತ್ಯ ವಸ್ತುಗಳ ಖರೀದಿಗೆ ನಿಗದಿಪಡಿಸಿದ್ದ ಸಮಯವನ್ನೂ ವಾಪಸ್ ಪಡೆಯಲಾಗಿದೆ. ಇದುವರೆಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಸಂಪೂರ್ಣ ಬಂದ್ ಹಿನ್ನೆಲೆಯಲ್ಲಿ ಅದನ್ನೂ ವಾಪಸ್ ಪಡೆಯಲಾಗಿದೆ. ಪತ್ರಿಕೆ, ಔಷಧ, ಹಾಲು ಮತ್ತು ಆಸ್ಪತ್ರೆ ಸೇವೆ ಲಭ್ಯವಿರುತ್ತದೆ.