ಮಡಿಕೇರಿ: ಕೇರಳದಲ್ಲಿ ಟೊಮೇಟೊ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಕೊಡಗಿನಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್. ವೆಂಕಟೇಶ್ ತಿಳಿಸಿದ್ದಾರೆ.
ಕೇರಳದಿಂದ ಕೊಡಗಿಗೆ ಬರುವ ವಾಹನಗಳನ್ನು ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು.
ಟೊಮೇಟೊ ಜ್ವರ 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತಿದ್ದು, ಕೋವಿಡ್‌ಗೂ ಟೊಮೇಟೊ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.
ಇದುವರೆಗೂ ಕೊಡಗಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಕೊಡಗಿಗೆ ಸಾಕಷ್ಟು ಪ್ರವಾಸಿಗರು ಬರುತ್ತಿರುವ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಜನ ಎಚ್ಚರ ವಹಿಸಬೇಕು.
ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳಿಗೂ ಜವಾಬ್ದಾರಿಯನ್ನು ನೀಡಲಾಗಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಮೈ-ಕೈ ನೋವು, ಜ್ವರ, ಚರ್ಮದಲ್ಲಿ ಗುಳ್ಳೆಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಿದರು.