ಕನಕಪುರ: ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ (ಅ.31) ಅಂತಿಮ ದಿನವಾಗಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ನಾಮಪತ್ರ ಸಲ್ಲಿಸಲು ಬಿ ಫಾರಂಗಾಗಿ ತಮ್ಮ ನಾಯಕರುಗಳ ಆಹ್ವಾನಕ್ಕಾಗಿ ಕಾದು ಕುಳಿತಿದ್ದಾರೆ.
ನಗರಸಭೆ ಚುನಾವಣೆಯನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಇಲ್ಲಿದೇ ಚುನಾವಣೆ ಎದುರಿಸಬೇಕು ಎಂಬ ಚಿಂತೆಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಒಳಗಾಗಿದ್ದರು. ಇದರಿಂದ ನಗರಸಭೆ ಚುನಾವಣೆಯ ಚಟುವಟಿಗಳಿಲ್ಲದೇ ಮಂಕು ಕವಿದಂತಾಗಿದ್ದ ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಸಿಕ್ಕ ಜಾಮೀನಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಆನೆ ಬಲ ಬಂದಂತಾಗಿದೆ.
ಚುನಾವಣೆ ಚಟುವಟಿಕೆಗಳನ್ನು ಚುರುಕುಗೊಳಿಸಿರುವ ಕಾಂಗ್ರೆಸ್ ಮುಖಂಡರು, ನಗರದ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಸಂಸದ ಡಿ.ಕೆ. ಸುರೇಶ್ ನೇತೃತ್ವದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆಗಾಗಿ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಬಿ ಫಾರಂಗಾಗಿ ಮುಗಿಬಿದ್ದ ಅಭ್ಯರ್ಥಿಗಳಿಗೆ 31 ವಾರ್ಡ್‌ಗಳಲ್ಲಿ ಮತದಾರರು, ಯಾವ ಅಭ್ಯರ್ಥಿಯನ್ನು ಸೂಚಿಸುತ್ತಾರೊ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ನಗರಸಭೆ ಚುನಾವಣೆಗೆ ಯಾರಿಗೆ ಬಿ ಫಾರಂ ಸಿಗಲಿದೆ ಎಂಬ ಕುತೂಹಲ ಕೆರಳಿಸಿದೆ. ಟಿಕೆಟ್ ನೀಡಲು ಮತದಾರನ ನಿರ್ಧಾರವೇ ಅಂತಿಮ ಎಂಬ ಮಾತುಗಳು ಕೇಳಿ ಬರುತ್ತಿವೆ.
ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಗೆ ಸಿದ್ಧತೆ: ಜೆಡಿಎಸ್ ಕೂಡ ನಗರಸಭೆ ಚುನಾವಣೆಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು, ಸ್ಥಳೀಯ ಮುಖಂಡರು ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ವರಿಷ್ಠರು ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಬನ್ನಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಜೆಡಿಎಸ್ ಮುಖಂಡರು ಆಕಾಂಕ್ಷಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ನೀಡಿ, ಅಭ್ಯರ್ಥಿಗಳ ಅಂತಿಮ ಆಯ್ಕೆಮಾಡುವ ಸಿದ್ಧತೆಯಲ್ಲಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಸಭೆ: ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿರುವ ಬಿಜೆಪಿಯ ಸ್ಥಳೀಯ ನಾಯಕರು, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ನೇತೃತ್ವದಲ್ಲಿ ಸಭೆ ನಡೆಸಿ, ಅಭ್ಯರ್ಥಿಗಳ ಅಂತಿಮ ಆಯ್ಕೆಗೆ ಸಿದ್ಧತೆ ನಡೆಸಿದೆ. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲವಾಗಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾದ ನಂತರ ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಪ್ರತಿ ವಾಡ್ ನಲ್ಲೂ ಕಾಂಗ್ರೆಸ್ ಅಭ್ಯರ್ಥಿಯ ಪ್ರತಿಸ್ಪರ್ಧಿಯಾಗಿ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾದುನೋಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪೂರ್ಣಗೊಳ್ಳದೇ ಇರುವುದರಿಂದ ಈವರೆಗೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ ಎಂದು ತಿಳಿದುಬಂದಿದೆ.