ಶಿವಮೊಗ್ಗ: ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನ.26ರಂದು ಅಖೀಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು, ಶಿವಮೊಗ್ಗದಲ್ಲೂ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಟಿಯು ಜಿಲ್ಲಾ ಸಂಚಾಲಕ ಎಂ. ನಾರಾಯಣ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಹಾಗೂ ಅನ್ನದಾತ ರೈತ, ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕನನ್ನು ಪೂರ್ಣ ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಅನಿರೀಕ್ಷಿತವಾಗಿ ಲಾಕ್‌ಡೌನ್ ಆಯಿತು. ಮೊದಲೇ ಸಂಕಷ್ಟದಲ್ಲಿರುವ ಕಾರ್ಮಿಕರ ಹಿತವನ್ನು ಕಾಪಾಡುವ ಬದಲಿಗೆ ಮತ್ತಷ್ಟು ಸಂಕಷ್ಟಕ್ಕೆ ಕೇಂದ್ರ ಸರ್ಕಾರ ನೂಕಿದೆ. ಇದನ್ನು ವಿರೋ ಧಿಸಿ ನ.26ರ ಬೆಳಿಗ್ಗೆ 11 ಗಂಟೆಗೆ ಮಹಾವೀರ ವೃತ್ತದಿಂದ ಜಿಲ್ಲಾ ಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಕೇಂದ್ರ ಸರ್ಕಾರ ಕಾರ್ಮಿಕ ಸಂಘಟನೆಗಳ ಜೊತೆಯಾವುದೇ ಚರ್ಚೆ ನಡೆಸದೇ ಕೋವಿಡ್-19 ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಹಾಗೂ ವಿರೋಧ ಪಕ್ಷದ ಗೈರು ಹಾಜರಿಯಲ್ಲಿ ಕಾರ್ಮಿಕರ ಹಿತಕ್ಕೆ ಧಕ್ಕೆ ತರುವಂತಹ ಮೂರು ಕಾರ್ಮಿಕ ಸಂಹಿತೆಗಳನ್ನು ಸಂಸತ್ ನಲ್ಲಿ ಅಪ್ರಜಾಸತ್ತಾತ್ಮಕ ರೀತಿಯಿಂದ ಅಂಗೀಕರಿಸಿದೆ. ಇದರಿಂದಾಗಿ ಕಾರ್ಮಿಕರಿಗೆ ಅನ್ಯಾಯವಾಗಿದೆ ಎಂದು ದೂರಿದರು.
ಇದನ್ನೂ ಓದಿ: ಎಂಪಿಎಂ ಕಾರ್ಖಾನೆಗೆ ಅರಣ್ಯಲೀಸ್ ಬೇಡ
ರೈತ ವಿರೋಧಿ ಕಾನೂನುಗಳನ್ನು ವಾಪಸ್‌ಪಡೆಯಬೇಕು. ಆದಾಯ ತೆರಿಗೆ ರಹಿತ ಕುಟುಂಬಗಳಿಗೆ 7,500 ರೂ. ಪಾವತಿಸಬೇಕು. ಎಲ್ಲ ಅಗತ್ಯವಿರುವವರಿಗೆ ತಿಂಗಳಿಗೆ 10 ಕೆಜಿ ಉಚಿತ ಪಡಿತರ ನೀಡಬೇಕು. ಸಾರ್ವಜನಿಕ ವಲಯ ಸೇವಾ ಸಂಸ್ಥೆಗಳ ಖಾಸಗೀ ಕರಣ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಅಖೀಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರಕ್ಕೆ ಅಖೀಲ ಭಾರತ ಸಂಘಟನೆಗಳು, ಕಾರ್ಮಿಕರು, ನೌಕರರು, ಅಸಂಘಟಿತ ಕ್ಷೇತ್ರದ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರು, ಆಟೋ, ಟ್ಯಾಕ್ಸಿ, ಸಾರಿಗೆ ನೌಕರರು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರು, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ನೀಡಿ ಮುಷ್ಕರದಲ್ಲಿ ಭಾಗವಹಿಸುತ್ತಿವೆ ಎಂದರು.