ತಿರುವನಂತಪುರ: ಕೇರಳದಾದ್ಯಂತ ಮಂಗಳವಾರ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಜ್ ಅನ್ನು ಘೋಷಿಸಲಾಗಿದೆ. ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನ ವಸತಿ ಪ್ರದೇಶಕ್ಕೆ ನೀರು ನುಗ್ಗಿ, ಅಡಚಣೆ ಉಂಟಾಗಿದೆ. ಹಲವು ನದಿಗಳಲ್ಲಿ ಪ್ರವಾಹದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಲ್ಲಂ, ಪತನಂತಿಟ್ಟ, ಆಲಪ್ಪುಳ ಜಿಲ್ಲೆಗಳಿಗೆ ಆರಂಜ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ತಿರುವಂತಪುರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಹೀಗಾಗಿ, 23 ಮನೆಗಳಿಗೆ ಹಾನಿಯಾಗಿದೆ. ಜತೆಗೆ ಬೆಳೆದು ನಿಂತ ಫಸಲುಗಳಿಗೂ ಹಾನಿಯಾಗಿದೆ. ಇನ್ನೊಂದೆಡೆ ಅ.1ರಂದು ವಾಮನಪುರ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಮಳೆಯ ಪ್ರಕೋಪದಿಂದಾಗಿ ಕೊಟ್ಟಾಯಂ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗಾಗಿ 17 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ಸ್ಥಾಪಿಸಿ, ಅಲ್ಲಿ ಅವರಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುರುವಾರದ ವರೆಗೆ ಧಾರಾಕಾರವಾಗಿ ಮಳೆ ಸುರಿಯುವ ಬಗ್ಗೆ ಹಾಗೂ ವಿವಿಧ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 30ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ.
ಇನ್ನೊಂದೆಡೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ.