ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಕ್ಕೆ ಸಂಬಂಧಿಸಿ ಇನ್ನೆರಡು ತಿಂಗಳಲ್ಲಿ ವರದಿ ಸಲ್ಲಿಕೆ ಆಗಲಿದೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಸಾರಿಗೆ ನಿಗಮಗಳ ಆರ್ಥಿಕ ಸ್ವಾವಲಂಬನೆಗೆ ನಿಯೋಜಿಸಿದ ಎಂ.ಆರ್. ಶ್ರೀನಿವಾಸ ಮೂರ್ತಿ ಸಮಿತಿಯು ಈ ವಿಷಯ ತಿಳಿಸಿದೆ.
ನಿಗಮಗಳ ಆರ್ಥಿಕ ಸ್ಥಿತಿಗತಿ, ಬಸ್‌ಗಳ ಕಾರ್ಯಾಚರಣೆ ಸಹಿತ ಹಲವು ಪ್ರಕಾರದ ಮಾಹಿತಿ ಕ್ರೋಡೀಕರಿಸುವ ಕಾರ್ಯ ನಡೆದಿದೆ. ಅಲ್ಲದೆ, ಸಾರಿಗೆ ನೌಕರರು, ಅಧಿಕಾರಿಗಳು, ತಜ್ಞರು ಒಳಗೊಂಡಂತೆ ವಿವಿಧ ವರ್ಗಗಳ ಸಲಹೆ-ಅಭಿಪ್ರಾಯಗಳನ್ನು ಕೂಡ ಸಂಗ್ರಹಿಸಲಾಗುತ್ತಿದೆ. ಇವೆಲ್ಲವನ್ನೂ ಸೇರಿಸಿ, ಮುಂದಿನ ಎರಡು ತಿಂಗಳಲ್ಲಿ ಈ ಸಂಬಂಧ ವರದಿ ಸಲ್ಲಿಸಲಾಗುವುದು ಎಂದು ಶ್ರೀನಿವಾಸ ಮೂರ್ತಿ ಹೇಳಿದರು.
ಇದನ್ನೂ ಓದಿ:ಸದ್ಯಕ್ಕೆ ಟೋಯಿಂಗ್ ನಿಲ್ಲಿಸಿದ್ದೇವೆ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ನಿಗಮಗಳ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು. ಆದಷ್ಟು ಬೇಗ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನುºಕುಮಾರ್ ಉಪಸ್ಥಿತರಿದ್ದರು.