ಬೆಂಗಳೂರು:ವೀಕೆಂಡ್ ಲಾಕ್‌ಡೌನ್ ಸಂದರ್ಭದಲ್ಲಿ ಅವಶ್ಯಕತೆಗೆ ಅನುಗುಣವಾಗಿ, ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡುವಂತೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದ್ದು, ಸದ್ಯಕ್ಕೆ ರಾತ್ರಿ ಬಸ್ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ.
ಇದನ್ನೂ ಓದಿ:ಝೊಮಾಟೊ ಡೆಲಿವರಿ ಹುಡುಗನ ಮೇಲೆ ಪೊಲೀಸರ ಅಮಾನುಷ ಹಲ್ಲೆ; ವಿಡಿಯೋ ವೈರಲ್
ಸಾರಿಗೆ ಕಾರ್ಯಾಚರಣೆಗೆ ಸಂಬಂಧಪಟ್ಟಂತೆ ಗುರುವಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿರುವ ಆರೋಗ್ಯ ಇಲಾಖೆ ವೀಕೆಂಡ್ ಕರ್ಪ್ಯೂ ಇರುವುದರಿಂದ ಜನದಟ್ಟಣೆ ಕಡಿಮೆ ಇರುತ್ತದೆ. ಹೀಗಾಗಿ ಎಲ್ಲ ಸಂಚಾರ ಅನುಸೂಚಿಗಳು ಕಾರ್ಯನಿರ್ವಹಿಸುವ ಅಗತ್ಯವಿಲ್ಲ ಎಂದು ಹೇಳಿದೆ.
ರಾತ್ರಿಸೇವೆಗಳನ್ನು ಆನ್‌ಲೈನ್ ಬುಕ್ಕಿಂಗ್ ಮೂಲಕ ಟಿಕೆಟ್ ದೃಢಪಡಿಸಬೇಕು. ಮುಂಗಡ ಟಿಕೆಟ್ ಪರಿಶೀಲಿಸಿ ಅಗತ್ಯವಿದ್ದಲ್ಲಿ ಮಾತ್ರ ರಾತ್ರಿ ಸಂಚಾರ ಮಾಡಬೇಕು. ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಿಂದ ಬರುವ ಪ್ರಯಾಣಿಕರಿಗೆ 72 ಗಂಟೆಗಳ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚಾಲನಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ. ಆದರೆ ರಾತ್ರಿ ಪ್ರಯಾಣದ ಬಸ್‌ಗಳಿಗೆ ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸದೇ ಇರುವುದರಿಂದ ಸದ್ಯಕ್ಕೆ ದೂರದ ಊರಿಗೆ ತೆರಳುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಇಲ್ಲ.