Advertisement

ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ

11:36 AM Jun 03, 2020 | Suhan S |

ಧಾರವಾಡ : ಜೂ. 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ಮಕ್ಕಳಿಗೆ ಉಚ್ಚ ನ್ಯಾಯಾಲಯವು ಸಾರಿಗೆ ಸೌಕರ್ಯ ಕಲ್ಪಿಸಲು ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ರಾಜ್ಯ ಸಾರಿಗೆ ಸಂಸ್ಥೆಯೊಂದಿಗೆ ಈ ನಿಟ್ಟಿನಲ್ಲಿ ಚರ್ಚಿಸಿದ್ದು, ಸೂಕ್ತ ದರದಲ್ಲಿ ಬಸ್‌ಗಳನ್ನು ಒದಗಿಸಲು ಸಂಸ್ಥೆ ಸಿದ್ಧವಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದರು.

Advertisement

ನಗರದಲ್ಲಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಶಾಲಾ ವಾಹನಗಳನ್ನೂ ಬಳಸಿಕೊಳ್ಳಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಮಕ್ಕಳನ್ನು ಕರೆತರುವ ಮಾರ್ಗದ ನಕ್ಷೆ ಸಿದ್ಧಪಡಿಸಬೇಕು. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ ಪರೀಕ್ಷೆ ಬರೆಯಲು ಪ್ರೋತ್ಸಾಹಿಸಬೇಕು ಎಂದು ಸೂಚಿಸಿದರು.

ಪರೀಕ್ಷೆಯ ಪಾವಿತ್ರ್ಯ ಮತ್ತು ಗಾಂಭಿರ್ಯತೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆಗಳನ್ನು ಆಯೋಜಿಸಬೇಕು. ಸರ್ಕಾರವು ಸಾಮಾಜಿಕ ಅಂತರ ಹಾಗೂ ಸುರಕ್ಷತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ಆಯೋಜಿಸಲು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಸವಾಲಾಗಿ ಸ್ವೀಕರಿಸಿ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ತನ್ನ ಸಾಮರ್ಥ್ಯ ಮತ್ತು ಕ್ಷಮತೆಯನ್ನು ಸಾಬೀತುಪಡಿಸಬೇಕು ಎಂದರು.

ಎಲ್ಲಾ ಜಿಲ್ಲೆಗಳಲ್ಲಿ ಮಾದರಿ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅಲ್ಲಿನ ವಿಧಾನಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕು. ವಿದ್ಯಾರ್ಥಿಗಳು ಮನೆಗಳಲ್ಲಿಯೇ ಮಾಸ್ಕ್ ಧರಿಸಿ ಪರೀಕ್ಷೆ ಬರೆಯುವ ಹವ್ಯಾಸ ರೂಢಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಕೆ ಕಡ್ಡಾಯವಾಗಿರುತ್ತದೆ. ಸಿಬ್ಬಂದಿ ಕೈಗವಸುಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಗುರುತಿಸಿರಬೇಕು. ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸರಣಿ, ಮಕ್ಕಳ ವಾಣಿ ಯೂಟ್ಯೂಬ್‌ ಚಾನಲ್‌ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ನಿರ್ವಹಿಸುತ್ತಿರುವ ಆನ್‌ಲೈನ್‌ ಪಾಠಗಳು ಹಾಗೂ ಸಹಾಯವಾಣಿ ಮೂಲಕ ನಡೆಯುತ್ತಿರುವ ಸಲಹೆಗಳನ್ನು ಇನ್ನಷ್ಟು ಚುರುಕುಗೊಳಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ನೇರವಾಗಿ ಸಂಪರ್ಕಿಸಿ ಪರೀಕ್ಷೆ ಕುರಿತು ಮಾಹಿತಿ ನೀಡಿ, ಪರೀಕ್ಷಾ ಕೇಂದ್ರ, ಸಾರಿಗೆ ಸೌಕರ್ಯದ ಅಗತ್ಯತೆ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

Advertisement

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ಮಕ್ಕಳು ತಮ್ಮ ಮನೆಯಿಂದಲೇ ಕುದಿಸಿ ಆರಿಸಿದ ನೀರನ್ನು ತರಲು ಸೂಚಿಸಲಾಗಿದೆ. ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸುಮಾರು 13 ಸಾವಿರ ವಿದ್ಯಾರ್ಥಿಗಳು ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಲ್ಲಿ ವಾಸವಿರುವವರಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳನ್ನು ಮತ್ತು ವಸತಿ ಶಾಲೆಗಳನ್ನು ಜೂ. 15 ರೊಳಗೆ ಪುನರಾರಂಭಿಸಿದರೆ ಆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದರು.

ಧಾರವಾಡ ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳಿವೆ. ಹೆಚ್ಚುವರಿಯಾಗಿ 17 ಉಪಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. 27,841 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲಾಡಳಿತ ಮತ್ತು ಜಿಪಂ ವತಿಯಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಗದಗ ಜಿಪಂ ಸಿಇಒ ಆನಂದ ಕೆ. ಮಾತನಾಡಿ, ಗದಗ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳು, 7 ಉಪಕೇಂದ್ರಗಳು ಇವೆ. 13,914 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ 3 ಬಾರಿ ಪೂರ್ವಸಿದ್ಧತಾ ಸಭೆ ಜರುಗಿವೆ. ಪ್ರತಿ 100 ವಿದ್ಯಾರ್ಥಿಗಳಿಗೆ 1 ಥರ್ಮಲ್‌ ಸ್ಕಾ Âನಿಂಗ್‌ ಉಪಕರಣ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಾವೇರಿ ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ 75 ಪರೀಕ್ಷಾ ಕೇಂದ್ರಗಳಿವೆ. 14 ಉಪಕೇಂದ್ರಗಳನ್ನು ಗುರುತಿಸಲಾಗಿದೆ. 21,789 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಖಾಸಗಿ ಸಂಘ-ಸಂಸ್ಥೆಗಳು ಮಾಸ್ಕ್ ಪೂರೈಸಲು ಮುಂದೆ ಬಂದಿವೆ. ವಿದ್ಯಾರ್ಥಿಗಳಿಗೆ ಸಮಯಾವಕಾಶ ದೊರೆತಿರುವುದರಿಂದ ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷೆ ಇದೆ ಎಂದರು.

ಶಾಸಕ ಅಮೃತ ದೇಸಾಯಿ, ಡಿಡಿಪಿಐ ಮೋಹನ ಹಂಚಾಟೆ, ಗದಗ ಉಪನಿರ್ದೇಶಕ ಎನ್‌.ಎಚ್‌. ನಾಗೂರ, ಹಾವೇರಿ ಉಪನಿರ್ದೇಶಕ ಎ.ಎನ್‌. ವಡಗೇರಿ ಸೇರಿದಂತೆ ಮೂರು ಜಿಲ್ಲೆಗಳ ಡಯಟ್‌ ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಿರಿಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next