Advertisement

ಆಯಾ ತಾಲೂಕಿನಲ್ಲೇ ಚಿಕಿತ್ಸಾ ಕೇಂದ್ರ

12:03 PM Jul 18, 2020 | Suhan S |

ಗಜೇಂದ್ರಗಡ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ತಾಲೂಕು ಕೇಂದ್ರದಲ್ಲಿ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಸೋಂಕಿತರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಪಟ್ಟಣದಲ್ಲಿ ಕೋವಿಡ್‌-19 ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ತಹಶೀಲ್ದಾರ್‌ ಎ.ಬಿ. ಕಲಘಟಗಿ ಹೇಳಿದರು.

Advertisement

ಕುಷ್ಟಗಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದೊಂದು ವಾರದಿಂದ ಗಜೇಂದ್ರಗಡ ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈ ಹಿಂದೆ ಗದಗ ಜಿಲ್ಲಾ ಕೇಂದ್ರದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಜಿಲ್ಲಾಧಿಕಾರಿಗಳು ಆಯಾ ತಾಲೂಕು ಕೇಂದ್ರದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಿ ಎಂದು ಸೂಚಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕುಷ್ಟಗಿ ರಸ್ತೆ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ 50 ಹಾಸಿಗೆ ಹಾಗೂ ಕಾಲಕಾಲೇಶ್ವರ ಬಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ 40 ಹಾಸಿಗೆಯ ಕೋವಿಡ್‌-19 ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.  ಈಗಾಗಲೇ ಎಲ್ಲ ವೈದ್ಯಕೀಯ ಸಿದ್ಧತೆಗಳು ನಡೆದಿವೆ. ಕೇಂದ್ರಗಳ ಸುತ್ತ ಪೊಲೀಸರನ್ನು ನಿಯೋಜಿಸಲಾಗುವುದು. ಇನ್ಮಂದೆ ತಾಲೂಕಿನ ಕೊರೊನಾ ಸೋಂಕಿತರಿಗೆ ಇಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದರು.

ಈ ವೇಳೆ ಶಿರಸ್ತೆದಾರ ವೀರಣ್ಣ ಅಡಗತ್ತಿ, ತಾಲೂಕು ಆರೋಗ್ಯಾಧಿಕಾರಿ ಮನೋಹರ ಕಣ್ಣಿ, ಗ್ರಾಮ ಲೆಕ್ಕಾಧಿಕಾರಿಗಳಾದ ಉಮೇಶ ಅರಳಿಗಿಡದ, ಶಬ್ಬೀರ ನಿಶಾನದಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next