ಜೇವರ್ಗಿ: ನೆಲೋಗಿಯಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಾಲಕನೊಬ್ಬ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಗಾಯಗೊಂಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಹೋದಾಗ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಮೃತಪಟ್ಟ ಹಿನ್ನಲೆಯಲ್ಲಿ ಗ್ರಾಮಸ್ಥರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಬಾಲಕನನ್ನು ನೆಲೋಗಿ ಗ್ರಾಮದ ಗುರು ಬಸವರಾಜ ಮಂಗಾ (10) ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಕನ್ನು ನೆಲೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಇರಲಿಲ್ಲ. ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ.
ನೆಲೋಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಲಕನಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿ ಇರದ ಕಾರಣ ಬಾಲಕ ಮೃತ ಹೊಂದಲು ಕಾರಣವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಆಸ್ಪತ್ರೆಯ ಗಾಜುಗಳನ್ನು ಪುಡಿ, ಪುಡಿ ಮಾಡಿದ ನಂತರ ಆ್ಯಂಬುಲೆನ್ಸ್‌ನ ಕಿಡಕಿ ಗಾಜುಗಳನ್ನು ಜಖಂಗೊಳಿಸಿದ್ದಾರೆ. ನಂತರ ಆಸ್ಪತ್ರೆಯ ಆವರಣದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ, ಬಾಗಿಲಿಗೆ ಮುಳ್ಳು ಬಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸ್ ಸಬ್ ಇನ್ಸಪೆಕ್ಟರ್ ಗೌತಮ ಗುತ್ತೇದಾರ, ಎ.ಎಸ್.ಐ. ಗುರುಬಸ್ಸು ಹಾಗೂ ಸಿಬ್ಬಂದಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.