ಕೋಲ್ಕತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಶನಿವಾರ ಸಂಜೆ ಟಿಎಂಸಿ ಶಾಸಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
ಸತ್ಯಜಿತ್ ಬಿಸ್ವಾಸ್ ಹತ್ಯೆಯಾದ ಶಾಸಕನಾಗಿದ್ದು, ಕೃಷ್ಣಗಂಜ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಸರಸ್ವತಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ಮಳೆಗರೆದು ಹತ್ಯೆಗೈದಿದ್ದಾರೆ.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಆರಂಭಿಸುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಟಿಎಂಸಿ ಹತ್ಯೆಯನ್ನು ಬಿಜೆಪಿ ಮಾಡಿದೆ ಎಂದು ಆರೋಪಿಸಿದೆ. ಬಿಜೆಪಿ ನಾಯಕ ಮುಕುಲ್ ರಾಯ್ ಅವರ ಬೆಂಬಲಿಗರು ಹತ್ಯೆ ಮಾಡಿಸಿದ್ದಾರೆ ಎಂದು ಟಿಎಂಸಿ ನಾಯಕ ಗೌರಿ ಶಂಕರ್ ದತ್ತಾ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ ಅವರು ಆರೋಪವನ್ನು ತಳ್ಳಿ ಹಾಕಿದ್ದು, ಹತ್ಯೆ ಆರೋಪಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದ್ದಾರೆ.