ಬೆಂಗಳೂರು: ತ್ರಿವಳಿ ತಲಾಕ್ ಪದ್ಧತಿ ನಿಷೇಧಿಸಿ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಈ ಕುರಿತು ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಮಹಮ್ಮದ್ಆರೀಫ್
ಆರೀಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಮೊಹಮ್ಮದ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ನ್ಯಾಯಪೀಠ ವಾದ ಆಲಿಸಿತು. ಈ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಕಾನೂನು ಸಚಿವಾಲಯಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯು ಸಂವಿಧಾನದ ಪರಿಚ್ಛೇದ 14, 15, 21 ಹಾಗೂ 25ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ಸಂವಿಧಾನಬಾಹಿರ ಎಂದು ಘೋಷಿಸಬೇಕು. ಅದೇ ರೀತಿ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಅನುಷ್ಠಾನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕೇಂದ್ರ ಸರ್ಕಾರದ ಕಾಯ್ದೆಯು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಒಂದು ವರ್ಗದ ಜನರ ಧಾರ್ಮಿಕ ಅಸ್ಮಿತೆಯನ್ನು ಗುರಿಯಾಗಿಟ್ಟುಕೊಂಡು ಶಿಕ್ಷಾರ್ಹ ಕಾನೂನು ರೂಪಿಸಲಾಗಿದೆ. ಇದು ದೊಡ್ಡ ಮಟ್ಟದ ಸಾರ್ವಜನಿಕ ಕೇಡಿಗೆ ಕಾರಣವಾಗುತ್ತದೆ. ಇದರ ಪರಿಶೀಲನೆ ನಡೆಸಿದ್ದರೆ, ಸಮಾಜದಲ್ಲಿ ಧ್ರುವೀಕರಣ ಹಾಗೂ ಸಾಮರಸ್ಯ ಭಂಗಕ್ಕೆ ಕಾರಣವಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿದಾರರ ಪರ ವಕೀಲ ರಹ್ಮತ್‌ಉಲ್ಲಾ ಕೊತ್ವಾಲ್ ವಾದ ಮಂಡಿಸಿದರು.