ಹುಬ್ಬಳ್ಳಿ: ಮಹದಾಯಿ ಹಾಗೂ ಕಳಸಾ-ಬಂಡೂರಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ರೈತರನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರಾದರೂ, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಅನಂತರ ಬಿಡುಗಡೆಗೊಳಿಸಿದರು.
ಇಲ್ಲಿನ ಸಿದ್ಧಾರೂಢಸ್ವಾಮಿ ಮಠದ ಮುಖ್ಯದ್ವಾರದಿಂದ ಕಾಂಗ್ರೆಸ್ ಕಚೇರಿವರೆಗೆ ಪಾದಯಾತ್ರೆ ನಡೆಸಿದದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ.
ಆದರೆ ಇದನ್ನು ಸಹಿಸದ ಕಾಂಗ್ರೆಸ್ ಬಿಜೆಪಿ ಮೇಲೆ ವಿನಾಕಾರಣ ಆರೋಪ ಮಾಡುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಕಾಂಗ್ರೆಸ್ ಪಕ್ಷದ ಕಚೇರಿ ಮುಂಭಾಗದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬಿಜೆಪಿ ಮುಖಂಡ ಮಹೇಶ ಟೆಂಗಿನಕಾಯಿ ಮಾತನಾಡಿ, ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯಸ್ಥಿಕೆ ವಹಿಸಿ ಗೋವಾ ಕಾಂಗ್ರೆಸ್ ನಾಯರನ್ನು ಒಪ್ಪಿಸುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.
ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿದರು. ಮುಖಂಡರಾದ ನಾಗೇಶ ಕಲಬುರ್ಗಿ, ಅಶೋಕ ಕಾಟವೆ, ದತ್ತಮೂರ್ತಿ ಕುಲಕರ್ಣಿ, ರಾಧಾಭಾಯಿ ಸಫಾರಿ, ಶಿವಾನಂದ ಮುತ್ತಣ್ಣವರ, ಶಿವು ಮೆಣಸಿನಕಾಯಿ, ಗೋಪಾಲ ಬದ್ದಿ, ಶಂಕರಪ್ಪ ಬಿಜವಾಡ, ಸುಬ್ರಹ್ಮಣ್ಯ ಶಿರಕೋಳ ಇದ್ದರು.