Advertisement

ಬಹಿರಂಗ ಪ್ರಚಾರ ಎರಡೇ ದಿನ – ಚುನಾವಣೆಯ ಕಾವು ಇನ್ನಷ್ಟು ಜೋರು

11:37 PM May 06, 2023 | Team Udayavani |

ಬೆಂಗಳೂರು: ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿಯಿದ್ದು, ಬಹಿರಂಗ ಪ್ರಚಾರಕ್ಕಿರುವ ಎರಡು ದಿನಗಳಲ್ಲಿ ಮೂರೂ ಪಕ್ಷಗಳ ನಾಯಕರು ಭರ್ಜರಿ ಪ್ರಚಾರಕ್ಕೆ ನಿರ್ಧರಿಸಿದ್ದಾರೆ.

Advertisement

ಸೋಮವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಮಂಗಳವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಹೀಗಾಗಿ ರವಿವಾರ ಮತ್ತು ಸೋಮವಾರ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಲಿದ್ದಾರೆ. ಪ್ರಚಾರಕ್ಕೆ ಸಮಯಾವಕಾಶ ಕಡಿಮೆ ಇರುವುದರಿಂದ ಸಾರ್ವಜನಿಕ ಸಭೆಗಳಿಗಿಂತ ರೋಡ್‌ ಶೋಗೆ ಹೆಚ್ಚು ಗಮನ ನೀಡಲಾಗುತ್ತಿದೆ.

ಪ್ರಧಾನಿ ಮೋದಿ ಅವರು ರವಿವಾರ ಸತತ 2ನೇ ದಿನ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ದು, ಅನಂತರ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಳಗಾವಿ ನಗರ ಹಾಗೂ ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿ, ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಆನೇಕಲ್‌ ಕ್ಷೇತ್ರದ ಚಂದಾಪುರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹರಪನಹಳ್ಳಿ, ಬಳ್ಳಾರಿಯಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಕೂಡ್ಲಿಗಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಆನೇಕಲ್‌, ಬೆಂಗಳೂರಿನ ಪುಲಕೇಶಿನಗರ ಹಾಗೂ ಶಿವಾಜಿನಗರ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸುವರು. ಪ್ರಿಯಾಂಕಾ ವಾದ್ರಾ ಅವರು ಮೂಲ್ಕಿ ಸಹಿತ ಹಲವು ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಂಡ್ಯ ಜಿಲ್ಲೆಯ ನಾಗಮಂಗಲ, ಪಾಂಡವಪುರ, ಮಳವಳ್ಳಿ, ತುಮಕೂರು ಭಾಗದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಚ್‌.ಡಿ. ಕೋಟೆ, ಕೆ.ಆರ್‌. ನಗರ, ಪಿರಿಯಾಪಟ್ಟಣ, ಹುಣಸೂರು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇಡೀ ದಿನ ರೋಡ್‌ ಶೋ ಹಾಗೂ ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಿರೇಕೆರೂರು ಕ್ಷೇತ್ರದ ರಟ್ಟಿàಹಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅನಂತರ ಪ್ರಧಾನಿ ಮೋದಿಯವರು ಭಾಗಿಯಾಗಲಿರುವ ಶಿವಮೊಗ್ಗ ಸಭೆಗೆ ತೆರಳಲಿದ್ದಾರೆ. ಕೇಂದ್ರ ಸಚಿವೆ ಸ್ಮತಿ ಇರಾನಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿ ಹಲವು ಬಿಜೆಪಿ ನಾಯಕರು ರಾಜ್ಯದ ಹಲವೆಡೆ ಪ್ರಚಾರ ನಡೆಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next