ಚಿಕ್ಕಬಳ್ಳಾಪುರ: ಕುತೂಹಲ ಕೆರಳಿಸಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಮತ್ತಿಬ್ಬರು ಆಕಾಂಕ್ಷಿ ಯಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರು ಅರ್ಜಿ ಸಲ್ಲಿಸಿದ ಬಳಿಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ಅಧ್ಯಕ್ಷ ಯಲವಹಳ್ಳಿ ಎನ್.ರಮೇಶ್ ಅರ್ಜಿ ಸಲ್ಲಿಸಿ ಗಮನ ಸೆಳೆದಿದ್ದರು. ಬಳಿಕ ಜಿಪಂ ಮಾಜಿ ಅಧ್ಯಕ್ಷ ಗಂಗರಕಾಲುವೆ ನಾರಾಯಣ ಸ್ವಾಮಿ ಅರ್ಜಿ ಸಲ್ಲಿಸಿ, ರಾಜಕೀಯ ವಲಯ ದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
ಅದಲ್ಲದೆ, ಚಿಕ್ಕಬಳ್ಳಾಪುರದಲ್ಲಿ ವಿವಿಧ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದ ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎನ್. ರಘು ಅವರು ತಮ್ಮ ಅಭಿಮಾನಿಗಳೊಂದಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ, ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎಂದು ಕುತೂಹಲದ ನಡುವೆ ನಾಲ್ವರು ಅರ್ಜಿ ಸಲ್ಲಿಸಿದ್ದಾರೆ.
ಕಾರ್ಯಕರ್ತರಲ್ಲಿ ಗೊಂದಲ: ಸಚಿವ ಡಾ. ಕೆ.ಸುಧಾಕರ್ ಅವರನ್ನು ಶತಾಯಗತಾಯ ವಾಗಿ ಸೋಲಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಮತ್ತೂಂದೆಡೆ ಕಾಂಗ್ರೆಸ್ ಪಕ್ಷದಲ್ಲೇ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಬಳ್ಳಾ ಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಪಕ್ಷ ಸಂಘಟನೆ ಮತ್ತು ಜನಸೇವೆಯಲ್ಲಿ ಸಕ್ರೀಯ ವಾಗಿ ತೊಡಗಿಸಿಕೊಂಡಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಪರ ಅನೇಕ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ.
ಮತ್ತೂಂದೆಡೆ ಅನುಭವಿ ರಾಜಕಾರಣಿ ಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲವಹಳ್ಳಿ ರಮೇಶ್ ಬಗ್ಗೆಯೂ ಒಲವು ವ್ಯಕ್ತಪಡಿಸಿದ್ದಾರೆ. ಒಟ್ಟಾರೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ದಿನೇ ದಿನೆ ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಹ ಉತ್ಸಾಹ ಹೆಚ್ಚಾಗುತ್ತಿದೆ. ಕೊನೆಯದಾಗಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.
ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ನಂದಿ ಆಂಜಿನಪ್ಪ ಅವರು ಅರ್ಜಿ ಸಲ್ಲಿಸಬಹುದು ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.