ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಸ್ಥಾನವನ್ನು ವಿಭಾಗಿಸುವುದು ಸೂಕ್ತ ಎನ್ನುವ ಮೂಲಕ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಸೋಮವಾರ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಒಂದು ಬಾರಿ ಯಾವುದೇ ರಾಜ್ಯದಲ್ಲಿ ತೀರ್ಮಾನ ತೆಗೆದುಕೊಂಡರೂ ಅದು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಮಹಾರಾಷ್ಟ್ರದಲ್ಲಿ ಪ್ರತಿಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕ ಸ್ಥಾನಗಳನ್ನು ಬೇರೆ ಮಾಡಲಾಗಿತ್ತು.
ಅದೇ ಮಾದರಿಯನ್ನು ಈಗ ಬೇರೆ ರಾಜ್ಯಗಳಲ್ಲಿಯೂ ಅಳವಡಿಸಿಕೊಳ್ಳುತ್ತಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಇಬ್ಬರೂ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಿದರೆ ಯಾವುದೇ ತೊಂದರೆಯಿಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಗೊಂದಲ ಸಂಬಂಧ ತಾವು ಹೈಕಮಾಂಡ್‌ಗೆ ಯಾವುದೇ ಪತ್ರವನ್ನಾಗಲಿ, ಈಮೇಲ್ ಆಗಲೀ ಮಾಡಿಲ್ಲ. ಹಿರಿಯ ನಾಯಕರೊಂದಿಗೆ ನಡೆದ ಸಭೆ ಬಗ್ಗೆ ಪ್ರಧಾನ ಕಾರ್ಯದರ್ಶಿಯವರಿಗೆ ಮಾಹಿತಿ ನೀಡಿದ್ದೇನಷ್ಟೆ. ಹೈಕಮಾಂಡ್ ನಾಯಕರು ನನ್ನನ್ನು ಕರೆದು ಚರ್ಚಿಸುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಗೊಂದಲ ಇರುವುದಂತೂ ನಿಜ. ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ ಬಳಿಕ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗದೆ ತಟಸ್ಥವಾಗಿಯೇ ಉಳಿದಿದ್ದಾರೆ. ಹೈಕಮಾಂಡ್ ಕೆಪಿಸಿಸಿಗೆ ಅಧ್ಯಕ್ಷರನ್ನು ನೇಮಕ ಮಾಡುವುದೇ ಆದರೆ ಆದಷ್ಟು ಬೇಗ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು.