Advertisement

ಕ್ಷುಲ್ಲಕ ವಿಚಾರಕ್ಕೆ ಜಗಳ: ಇಬ್ಬರ ಹತ್ಯೆ

12:18 PM Feb 18, 2023 | Team Udayavani |

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆಟದ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿದ್ದ ಆಟದ ಮೈದಾನದಲ್ಲಿ ಕಾರು ನಿಲ್ಲಿಸುವ ವಿಚಾರವಾಗಿ ಉಂಟಾದ ಜಗಳದಲ್ಲಿ ಚಾಕು ಇರಿತಕ್ಕೆ ಒಳಗಾಗಿದ್ದ ದೊಡ್ಡಬೆಳವಂಗಲ ಗ್ರಾಮದ ಡಿ.ಎಸ್‌.ಭರತ್‌ ಕುಮಾರ್‌ (24), ಪ್ರತೀಕ್‌ (17) ಮೃತಪಟ್ಟಿದ್ದಾರೆ.

Advertisement

ಡಿ. ಎಸ್‌.ಭರತ್‌ ಕುಮಾರ್‌ ಎಂಜಿನಿಯರಿಂಗ್‌ ಹಾಗೂ ಪ್ರತೀಕ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಶಿವರಾತ್ರಿ ಹಬ್ಬದ ಅಂಗವಾಗಿ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಹುಲಿಕುಂಟೆ ತಂಡದ ಬೆಂಬಲಿಗರು ಕಾರು ನಿಲ್ಲಿಸುವ ವಿಚಾರವಾಗಿ ದಾಂಧಲೆ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಬಿಗುವಿನ ವಾತಾವರಣ: ಇಬ್ಬರು ಯುವಕರು ಮೃತಪಟ್ಟ ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಪೊಲೀಸರು ಲಾಠಿ ಪ್ರಹಾರ ನಡೆಸುವ ಮೂಲಕ ಜನರ ಗುಂಪನ್ನು ಚದುರಿಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದರು.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ : ಕೊಲೆ ಪ್ರಕರಣದ ಘಟನೆ ಸಮೀಪದಲ್ಲಿನ ಅಂಗಡಿಗಳಲ್ಲಿ ಆಳವಡಿಸಲಾಗಿದ್ದ ಸಿಸಿಟೀವಿಗಳಲ್ಲಿ ಸೆರೆಯಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸ್‌ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಂತ್ಯಕ್ರಿಯೆ ಶನಿವಾರ ನಡೆಲಿದ್ದು, ದೊಡ್ಡಬೆಳವಂಗಲದಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಹಾಕಲಾಗಿದೆ. ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ‌

Advertisement

Udayavani is now on Telegram. Click here to join our channel and stay updated with the latest news.

Next