ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗಳ ಬೆಡ್‌ಗಳು ಖಾಲಿ ಇವೆ. ಆದರೆ ಸಾರ್ವಜನಿಕರ ನಿರ್ಲಕ್ಷ್ಯದಿಂದ ಮತ್ತೆ ಪ್ರಕರಣ ಹೆಚ್ಚಳವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಮದುವೆ ಸಮಾರಂಭಕ್ಕೆ 200ಕ್ಕಿಂತ ಹೆಚ್ಚು ಜನ ಸೇರಿದರೆ ಅನುಮತಿ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರಕಾರದ ಮಾರ್ಗಸೂಚಿಯಂತೆ 200 ಮಂದಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಆದರೆ 300-400 ಮಂದಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡು ಬಂದಿದೆ. ಹೀಗಾಗಿ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ಗಳು ಅನುಮತಿ ನೀಡುವ ಸಂದರ್ಭದಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ ಕಂಡುಬಂದರೆ ಅಧಿಕಾರಿ ವಿರುದ್ಧವೂ ಕ್ರಮತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಮಣಿಪಾಲ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ : ಮಹಿಳೆ ಸೇರಿ 9 ಮಂದಿ ಬಂಧನ
ಅಂಗಡಿ ಮಾಲೀಕರ ಪರವಾನಗಿ ರದ್ದು
ಅಂಗಡಿ ಮಾಲಕರು ಹಾಗೂ ಸಿಬಂದಿ ಮಾಸ್ಕ್ ಗಳನ್ನು ಸರಿಯಾಗಿ ಹಾಕಿಕೊಳ್ಳದಿರುವುದು ಕಂಡುಬಂದಿದೆ. ಅಂತಹ ಅಂಗಡಿಗಳ ಪರವಾನಿಗೆಯನ್ನು ತಾತ್ಕಾಲಿಕ ರದ್ದು ಮಾಡುವಂತೆ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಬಸ್‌ಗಳಲ್ಲಿ ಚಾಲಕರು ಮತ್ತು ನಿರ್ವಾಹಕರು, ಪ್ರಯಾಣಿಕರಿಗೆ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. ಕೋವಿಡ್-19 ನಿಯಮಾವಳಿಗಳನ್ನು ಪಾಲಿಸದಿದ್ದರೆ ಕಠಿನ ಕಾನೂನು ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.