ಉಡುಪಿ: ಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ.1ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ ಎಂದರು.
ಅಂದು ಬೆಳಗ್ಗೆ 8ಕ್ಕೆ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಅನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.
ಜಿ.ಪಂ.ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಎಎಸ್‌ಪಿ ಕೆ.ಎಸ್. ಹೆಗ್ಡೆ, ನಗರಸಭೆ ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಡಿ.ಡಿ.ಪಿ.ಐ. ಗಣಪತಿ ಕೆ., ಡಿ.ಡಿ.ಪಿ.ಯು. ಮಾರುತಿ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.