ಉಡುಪಿ: ಜಿಲ್ಲೆಯು ಕೊರೊನಾ 1 ಮತ್ತು 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಈಗಾಗಲೇ ಶೇ. 100 ಗುರಿ ಸಾಧಿಸಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಡೋಸ್ ನೀಡುವ ಉದ್ದೇಶದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷದಿಂದ 59 ವರ್ಷದ ವರೆಗಿನ ಸಾರ್ವಜನಿಕರಿಗೆ ಸೆ.30ರ ವರೆಗೆ ಉಚಿತ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮಕ್ಕೆ ಜು.18ರಂದು ಚಾಲನೆ ನೀಡಲಾಗುವುದು.
ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟ 10,04,712 ಫಲಾನುಭವಿಗಳು ಮೊದಲ ಡೋಸ್ ಪಡೆದು ಶೇ.100.57 ಹಾಗೂ 10,00,092 ಮಂದಿ ಎರಡನೇ ಡೋಸ್ ಪಡೆದಿದ್ದು, ಶೇ.100.11 ಸಾಧನೆ ಆಗಿದ್ದು, ಮುನ್ನೆಚ್ಚರಿಕೆ ಡೋಸ್ ಪಡೆಯಲು ಜಿಲ್ಲೆಯಲ್ಲಿ 18 ರಿಂದ 59 ವರ್ಷದ 8,00,000 ಫಲಾನುಭವಿ ಇದ್ದಾರೆ. 18 ವರ್ಷ ಮೇಲ್ಪಟ್ಟ, 2ನೇ ಡೋಸ್ ಲಸಿಕೆ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜು.18ರಿಂದ ಹತ್ತಿರದ ಸರಕಾರಿ ಆರೋಗ್ಯ ಕೇಂದ್ರಗಳ ಹೋಗಿ ಉಚಿತವಾಗಿ ಲಸಿಕೆ ಪಡೆಯಬಹುದು.
ವಿದೇಶಕ್ಕೆ ತೆರಳುವ 18 ವರ್ಷ ಮೇಲ್ಪಟ್ಟ ಫಲಾನುಭವಿಗಳು ಎರಡನೇ ಡೋಸ್ ಪಡೆದು 3 ತಿಂಗಳು ದಾಟಿದಲ್ಲಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಬಹುದಾಗಿದೆ. ಸೆ.30ರ ಒಳಗೆ 18 ವರ್ಷದಿಂದ 59 ವರ್ಷದ ವರೆಗಿನ ಎಲ್ಲರಿಗೂ ಮುನ್ನೆಚ್ಚರಿಕೆ ಲಸಿಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲ ಸರಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಗ್ರಾ.ಪಂ. ಸಹಯೋಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಕಾರ್ಯ ನಿರ್ವಹಿಸುವ ವಿವಿಧ ಖಾಸಗಿ ಸಂಸ್ಥೆಗಳಲ್ಲೂ ಮುನ್ನೆಚ್ಚರಿಕೆ ಡೋಸ್ ನೀಡುವ ಮೂಲಕ ಗುರಿ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.
ಇಂದು ಅಭಿಯಾನಕ್ಕೆ ಚಾಲನೆ
ಜಿ.ಪಂ. ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಸೋಮವಾರ ಬೆಳಗ್ಗೆ 10ಕ್ಕೆ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.