Advertisement
ಈ ಆಸ್ಪತ್ರೆ ಶಂಕುಸ್ಥಾಪನೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗವಹಿಸಬೇಕಿದೆ. ಅದರೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ಮಠಕ್ಕೆ ತೆರಳಿದರೆ, ಕುರುಬ ಸಮುದಾಯದ ಜನರು ಮುನಿಸಿಕೊಳ್ಳುತ್ತಾರೆ ಎಂಬ ಕಾರಣಕ್ಕೆ ಆ ಕಾರ್ಯಕ್ರಮದಿಂದ ದೂರ ಉಳಿಯಲು ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕನಕನ ಕಿಂಡಿ ವಿವಾದ ಬಗೆ ಹರಿಯದ ಹಿನ್ನೆಲೆಯಲ್ಲಿಕುರುಬ ಸಮುದಾಯದ ಯಾವ ಮುಖಂಡರೂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವುದಿಲ್ಲ.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಹೋದರೆ, ಕರಾವಳಿ ಭಾಗದಲ್ಲಿ ತಪ್ಪು ಸಂದೇಶ ರವಾನೆಯಾಗುತ್ತದೆ ಎನ್ನುವುದು ಅ ಭಾಗದ ಕಾಂಗ್ರೆಸ್ ನಾಯಕರ ವಾದ, ಹೀಗಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಕರಾವಳಿ ಭಾಗದ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಆಸ್ಪತ್ರೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ಪ್ರವಾಸ ಪಟ್ಟಿಯಲ್ಲಿ ಜೂನ್ 18 ರಂದು ಉಡುಪಿ ಜಿಲ್ಲಾ ಭೇಟಿ ಸೇರಿದೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಇನ್ನು ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳುವಂತೆ ಆರೋಗ್ಯ ಸಚಿವ ರಮೇಶ್ ಕುಮಾರ್, ಆಹಾರ ಸಚಿವ ಯು.ಟಿ.ಖಾದರ್ ಮತ್ತು ಪ್ರಮೋದ್ ಮಧ್ವರಾಜ್ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.