ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯ ಜೂ. 4ರಂದು ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗುವುದು ಹಾಗೂ ಮೆರವಣಿಗೆ, ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀ. ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ.
ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳ್ಳೋತ್ಸವ, ಪ್ರತಿಭಟನ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಹಾಗೂ ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿರುತ್ತದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.