ಉಡುಪಿ: ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಜನವರಿ 16, 2021) ವಿಧ್ಯುಕ್ತವಾಗಿ ಚಾಲನೆ ನೀಡಿದ ಬೆನ್ನಲ್ಲೇ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ನವೀನ್ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಚೂಡ ಹಾಜರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮದ ಚಾಲನೆ ನೇರಪ್ರಸಾರ ಹಿನ್ನೆಲೆ ಮೋದಿ ಅವರ ಭಾಷಣ ಆಲಿಸಿದ ನಂತರ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ಸಿಬಂದಿಗಳಿಗೆ, ವೈದ್ಯಕೀಯ ಸಿಬಂದಿಗಳಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಾಯಿತು.
ಜಿಲ್ಲೆಗೆ 12,000 ಡೋಸ್ ಲಸಿಕೆ ಬಂದಿದ್ದು, ಜನವರಿ 16ರಂದು ಆರು ಕೇಂದ್ರಗಳಲ್ಲಿ ತಲಾ ನೂರರಂತೆ 600 ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಉಡುಪಿ ಜಿಲ್ಲಾಸ್ಪತ್ರೆ, ಡಾ.ಟಿಎಂಎ ಪೈ ಆಸ್ಪತ್ರೆ, ಉಡುಪಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಂದಾಪುರದ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.