ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಮಂಗ ನ ಕಾಯಿ ಲೆ) ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆರೆ ಜಿಲ್ಲೆಯಾದ ಶಿವಮೊಗ್ಗದಲ್ಲಿ 47, ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಮಂಗನ ಕಾಯಿಲೆ ವರದಿಯಾಗಿಲ್ಲ. ಈ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಕಾಡಂಚಿನ ಗ್ರಾಮದಲ್ಲಿ ಮಂಗಗಳು ಸತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದು ಡಿಸಿ ಸೂಚಿಸಿದರು.
ಕಾಡಂಚಿನ ಗ್ರಾ.ಪಂ.ಗಳ ಪಿಡಿಒ, ಅರಣ್ಯ ಇಲಾಖೆ ಅಧಿಕಾರಿಗಳು, ಪಶುಪಾಲನೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಮೇಲ್ವಿಚಾರಣೆ ನಡೆಸಬೇಕು. ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರು ಆಗಮಿಸಿದಾಗ ಅವರಿಗೂ ಸಹ ಈ ರೋಗದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಎಚ್ಚರಿಕೆ ವಹಿಸಲು ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.