Advertisement

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

02:42 AM Jan 09, 2025 | Team Udayavani |

ಬೆಂಗಳೂರು: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರಕ್ಕೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಜ್ಜಾಗಿದೆ. ರಾಜ್ಯದ ವಿಶ್ವ ವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡುವ ವಿ.ವಿ. ಧನಸಹಾಯ ಆಯೋಗದ (ಯುಜಿಸಿ) ಕರಡು ನಿಯಮಾವಳಿ ಬಗ್ಗೆ ಸಿದ್ದರಾಮಯ್ಯ ತಿರುಗಿಬಿದ್ದಿದ್ದಾರೆ.

Advertisement

ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರಕಾರದ ಪರಮಾಧಿಕಾರ. ಅದ‌ನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರಕಾರದ ಕಣ್ಣು ಈಗ ರಾಜ್ಯದ ವಿ.ವಿ.ಗಳ ಮೇಲೆ ಬಿದ್ದಿದ್ದು, ವಿ.ವಿ. ಧನಸಹಾಯ ಆಯೋಗ (ಯುಜಿಸಿ) ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಗಳನ್ನು ನಮ್ಮ ಸರಕಾರ ಪರಿಶೀಲಿಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು. ಬಿಜೆಪಿಯೇತರ ಸರಕಾರಗಳಿರುವ ರಾಜ್ಯಗಳ ಜೊತೆ ಸಮಾಲೋಚಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.

ಅಧಿಕಾರ ಕಸಿಯುವುದು ಖಂಡನೀಯ
ಯುಜಿಸಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿ.ವಿ.ಗಳ ಉಪಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಿರುವ ನಿಯಮಾವಳಿ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರಕಾರ ಶೋಧನಾ ಸಮಿತಿ ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರದಿಂದ ರಾಜ್ಯ ಸರಕಾರದ ಮೇಲಿನ ನೇರ ಸವಾರಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದ ವಿ.ವಿ.ಗಳ ಕುಲಪತಿ ನೇಮಕಾತಿಗೆ ರಾಷ್ಟ್ರ ಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿ ಆಹ್ವಾನಿಸಬೇಕೆಂದು ಹೊಸ ನಿಯಮಾವಳಿ ಹೇಳುತ್ತಿದೆ. ಹೊಸ ನಿಯಮಗಳು ಜಾರಿಗೆಯಾದರೆ ಇಲ್ಲಿಯವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್‌ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?
ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ವಿ.ವಿ.ಗಳ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next